

ಉಡುಪಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿದಾರರು ಹೊಸ ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ತಿಳಿಸಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ಕಾಯ್ದೆ ಕುರಿತು ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳು, ಸಾಲ ನೀಡಿಕೆ ಎಜೆನ್ಸಿ ಹಾಗೂ ಲೇವಾ ದೇವಿದಾರರ ದುಬಾರಿ ಬಡ್ಡಿಗಳಿಂದ ಜನರು ತೊಂದರೆಗೊಳಗಾಗಿದ್ದಾರೆ. ಕೆಲವು ಸಂಸ್ಥೆಗಳು ಬಲವಂತ ವಾಗಿ ವಸೂಲಾತಿ ಮಾಡುವುದು ಕಂಡುಬಂದಿದೆ. ವಿಶೇಷವಾಗಿ ರೈತರು, ಮಹಿಳೆಯರು ಆರ್ಥಿಕ ದುರ್ಬಲರು ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ಪ್ರಕರಣಗಳು ವರದಿಯಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತುವ ಸಂಸ್ಥೆಗಳು ಕಡ್ಡಾಯವಾಗಿ ಮೂವತ್ತು ದಿನಗಳ ಒಳಗಾಗಿ ಸೂಕ್ತ ಪ್ರಧಿಕಾರದ ಮುಂದೆ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು. ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್ಗಳು ನಿಗದಿತ ಮೊತ್ತದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಮತ್ತಿತರರು ಉಪಸ್ಥಿತರಿದ್ದರು.