

ನವದೆಹಲಿ: ರಾಜ್ಯ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ನಿಗಮಕ್ಕೆ ಮತ್ತೊಂದು ಪ್ರಶಸ್ತಿಯ ಗರಿ ಮೂಡಿದೆ. ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024 ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಲಭಿಸಿದೆ.
ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಸಾರಿಗೆ ಸಂಜೀವಿನಿ ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿದೆೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ನೀಡುತ್ತಾ ಬಂದಿದೆ.
ನವದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನ ಸಿಲ್ವರ್ ಓಕ್ ಹಾಲ್ನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸ್ಕಾಚ್ ಗ್ರೂಪ್ ಅಧ್ಯಕ್ಷ ಸಮೀರ್ ಕೊಚ್ಚರ್, ಉಪಾಧ್ಯಕ್ಷ ಡಾ.ಗುರುಶರಣ್ ಧನ್ಪಾಲ್ ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್‌ಆರ್‌ಟಿಸಿ ಮುಖ್ಯ ಕಾನೂನು ಅಧಿಕಾರಿ ವೆಂಕಟೇಶ ಮತ್ತು ನಿಗಮದ ಮುಖ್ಯ ವ್ಯವಸ್ಥಾಪಕ ಅಶ್ರಫ್ ಕೆ.ಎಂ. ಸಂಸ್ಥೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.