ಗ್ಯಾರಂಟಿ ಯೋಜನೆಗಳಿಂದ ರಾಜ್ಯ ತತ್ತರ

IMG-20240815-WA0301
Published on

ಹೊಳೆನರಸೀಪುರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ತತ್ತರಿಸಿ ಹೋಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಯಲು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


ನೆರೆಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರವು 1.2 ಲಕ್ಷ ರೂ. ಬಿಡುಗಡೆ ಮಾಡುತ್ತಿದೆ. ಇದರಿಂದ ಮನೆ ಕಟ್ಟಲು ಸಾಧ್ಯವಿದೆಯೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಇಲ್ಲಿ ಬಂದು ಪರಿಶೀಲನೆ ನಡೆಸಿದ್ದಾರೆ. ಬೆಳೆ ಪರಿಹಾರವನ್ನು ಸರ್ಕಾರ ಎಷ್ಟು ಕೊಟ್ಟಿದೆ? ಶಿಕ್ಷಣಕ್ಕೆ ಸರಿಯಾದ ಅನುದಾನ ಬಿಡುಗಡೆ ಮತ್ತು ಮೂಲ ಸೌಕರ್ಯ ಒದಗಿಸದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ನಿಂತಿವೆ. ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಅನುದಾನ ತಂದು ಸ್ಥಳದಲ್ಲಿಯೇ ರೈತರಿಗೆ ಪರಿಹಾರದ ಚೆಕ್‌ನ್ನು ವಿತರಿಸಲಾಗುತ್ತಿತ್ತು. ಈ ಸರ್ಕಾರ ಪರಿಹಾರ ವಿತರಿಸುವಲ್ಲಿ ವಿಫಲವಾಗಿದೆ. ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಕಿಡಿಕಾರಿದರು.
ಇಂದು ನಾಲೆಗಳ ಹೂಳು ಎತ್ತಿಲ್ಲ, ದುರಸ್ತಿಗಾಗಿ ಬಿಡಿಗಾಸು ಕೊಟ್ಟಿಲ್ಲ, ಗ್ಯಾರಂಟಿ ಯೋಜನೆಗಳಿಂದ ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡದಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.


ತಾಲೂಕು ದಂಡಾಧಿಕಾರಿ ಕೆ.ಕೆ. ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಅರುಣ್ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ವಿವಿಧ ರೀತಿಯ ಸ್ತಬ್ಧಚಿತ್ರಗಳು ಹಾಗೂ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯ ಭಾವಚಿತ್ರಗಳೊಂದಿಗೆ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.


ಬಿಇಒ ಸೋಮಲಿಂಗೇಗೌಡ, ಸಹಾಯಕ ಕೃಷಿ ನಿರ್ದೇಶಕಿ ಸ್ವಪ್ನ, ತಾಲೂಕು ಪಂಚಾಯತಿಯ ತಾಂತ್ರಿಕ ಅಧಿಕಾರಿ ಪಿ ಆರ್ ಗೋಪಾಲ್, ಜಿಲ್ಲಾ ಪಂಚಾಯತ್ ಅಭಿಯಂತರ ಪ್ರಶಾಂತ್, ಪಿಡಬ್ಲ್ಯೂಡಿ ಇಲಾಖೆಯ ಅಭಿ ಅಂತರ ಪವನ್, ಆರಕ್ಷಕ ವೃತ್ತ ನಿರೀಕ್ಷಕ ಪ್ರದೀಪ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ನಾಗೇಂದ್ರ, ಪುರಸಭೆ ಮಾಜಿ ಅಧ್ಯಕ್ಷ ಸುಧಾ ನಳಿನಿ, ಜ್ಯೋತಿ ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net