ಬಿಜೆಪಿ ರೈತ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ 8ಕ್ಕೆ

shanmukha gurikar
Published on

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತಪರ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸೆ. 8ರಂದು ಬೆಳಗ್ಗೆ 11ಕ್ಕೆ ಬಿಜೆಪಿ ರೈತ ಮೋರ್ಚಾ ಘಟಕದ ವತಿಯಿಂದ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಷಣ್ಮುಖ ಗುರಿಕಾರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿತ ಬೆಳೆ ಪರಿಹಾರವನ್ನು ಹೆಕ್ಟೇರ್​ಗೆ 50 ಸಾವಿರ ರೂ. ಘೊಷಿಸಬೇಕು. ಗ್ರಾಮೀಣ ಭಾಗದ ಹೊಲಗಳಿಗೆ ಹೋಗಲು ‘ನಮ್ಮ ಹೊಲ ನಮ್ಮ ರಸ್ತೆ’ ಯೋಜನೆಗೆ ತಕ್ಷಣ ಅನುದಾನ ನೀಡಬೇಕು. ಬರಗಾಲ ಸಮಸ್ಯೆ ನಿವಾರಣೆಗಾಗಿ ಸರ್ಕಾರ ಯುದ್ದೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಅಭಾವದಿಂದ ರೈತರ ಪಂಪ್​ಸೆಟ್​ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡಬಾರದು. ರೈತರ ಜಮೀನುಗಳಲ್ಲಿರುವ ತೆರೆದ ಬಾವಿಯ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ನಿತ್ಯ ಹಗಲು ಹೊತ್ತಿನಲ್ಲಿ ಏಳು ಗಂಟೆ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.

ರೈತ ವರ್ಗಕ್ಕೆ ಧೈರ್ಯ ತುಂಬುವ ಮತ್ತು ಅವರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ ತಾಲೂಕು ಭಾಗದಲ್ಲಿ ವಾಡಿಕೆಗಿಂತ ಶೇ. 40ರಷ್ಟು ಕಡಿಮೆ ಮಳೆ ಆಗಿರುವುದರಿಂದ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೊಷಣೆ ಮಾಡಬೇಕು. ಜಾನುವಾರುಗಳಿಗೆ ತಕ್ಷಣ ಆಹಾರ-ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮೌನೇಶ ಹಪ್ಪಳದ, ದೇವರಾಜ, ಪ್ರತಾಪ ಪಾಟೀಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net