

ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯನ್ನು 40 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆರೋಗ್ಯ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆ.ಗುರುಶಾಂತಪ್ಪ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಬಗೆಹರಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡುವ ಸಂಬಂಧ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೆ.ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯನ್ನು ಪಟ್ಟಣ ಸೇರಿದಂತೆ ಸುತ್ತಮುತ್ತಲ ನೂರಾರು ಗ್ರಾಮಗಳ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಕೆಲವೊಂದು ಸಮಸ್ಯೆಗಳು ಇರುವುದರಿಂದ ಸಂಪೂರ್ಣವಾಗಿ ಚಿಕಿತ್ಸೆ ನೀಡಲು ತೊಂದರೆಯಾಗುತ್ತಿರುವುದರಿಂದ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಇರುವುದರಿಂದ ಅಪಘಾತಗಳು ಸಂಭವಿಸಿದಾಗ ಗಾಯಾಳುಗಳಿಗೆ ಸೂಕ್ತ ಹಾಗೂ ಉತ್ತಮ ಚಿಕಿತ್ಸೆ ಕೊಡಿಸುವ ಸಲುವಾಗಿ ಅಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.
ನೂತನ ಕಟ್ಟಡ ನಿರ್ಮಾಣ ಸೇರಿದಂತೆ ವೈದ್ಯರು ಉಳಿದುಕೊಳ್ಳಲು ವಸತಿ ಗೃಹಗಳು, ಸುಸಜ್ಜಿತ ಐಸಿಯು ಘಟಕ, ಹೈಟೆಕ್ ಪ್ರತ್ಯೇಕ ಪ್ರಯೋಗ ಶಾಲೆ, ಪ್ರತ್ಯೇಕ ಒಟಿ, ತುರ್ತು ಸೇವಾ ಘಟಕ, ನೂತನ ಡಯಾಲಿಸಿಸ್ ಕೇಂದ್ರ, ನೂತನ ಶಸ್ತ್ರ ಚಿಕಿತ್ಸಾ ಕೊಠಡಿ ಸೇರಿದಂತೆ ಅಗತ್ಯ ಸೌಕರ್ಯ ಹಾಗೂ ಶುಚಿತ್ವವನ್ನು ಗಮನದಲ್ಲಿಟ್ಟುಕೊಂಡು ಉತ್ತಮ ವಾತಾವರಣದೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ ವರದಿ ಸಹಿತ ಸಲ್ಲಿಸಲಾಗುವುದು. ನಂತರ ಅನುದಾನ ಬಿಡುಗಡೆಯದ ಬಳಿಕ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಪ್ರಸ್ತುತ ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ನಿಗದಿತ ಸಮಯಕ್ಕೆ ಬರಬೇಕು ಮತ್ತು ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಚಿಕಿತ್ಸೆ ನೀಡಬೇಕು. ಇಲ್ಲದಿದ್ದರೆ ಅಂತಹ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರಬಿ.ಗೌಡ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಬಾಲಕೃಷ್ಣ, ಪಿಡ್ಯೂಡಿ ಎಇ ದೇವಾನಂದ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.