

ಬೇಲೂರು : ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಸಹಕಾರ ನೀಡಿದರೆ ಗುಣಮಟ್ಟದ ಕಾಮಗಾರಿಯೊಂದಿಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ದಬ್ಬೆ ಗಡಿಯಲ್ಲಿ ಬುಧವಾರ ಆಯೋಜಿಸಿದ್ದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಬಹುತೇಕ ಭಾಗದಲ್ಲಿ ರಸ್ತೆಗಳು ಅತಿಯಾದ ಮಳೆಯಿಂದ ಸಂಪೂರ್ಣವಾಗಿ ಹಾಳಾಗಿದೆ. ಆದರೆ ಹಂತ ಹಂತವಾಗಿ ಎಲ್ಲ ರಸ್ತೆಗಳ ಅಭಿವೃದ್ಧಿಗೂ ಅನುದಾನ ತಂದು ಕೆಲಸ ಮಾಡಿಸಲಾಗುತ್ತಿದೆ. ಈಗ ದಬ್ಬೆ ಗಡಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು, ಶೀಘ್ರದಲ್ಲೆ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸಲಿದ್ದಾರೆ. ಇದರಿಂದ ಈ ಭಾಗದ 30 ಕ್ಕೂ ಹೆಚ್ಚಿನ ಗ್ರಾಮಗಳ ಅಭಿವೃದ್ಧಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಮಾಡುವ ಮೂಲಕ ಸಾರ್ವಜನಿಕರ ಉಪಯೋಗಕ್ಕೆ ಸಹಕಾರ ನೀಡಬೇಕು. ಅಲ್ಲದೆ ಕಳೆದ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲೆ ತಾಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಕುರಿತು ತಿಳಿದುಕೊಂಡಿದ್ದೆ. ಇದೀಗ ಕ್ಷೇತ್ರದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವತ್ತ ಹಾಗೂ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯತ್ತ ಹೆಚ್ಚು ಗಮನ ಹರಿಸಲಾಗಿದೆ. ಮಲೆನಾಡು ಭಾಗದ ಎಲ್ಲ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಸರ್ಕಾರದಿಂದ ಅನುದಾನ ತಂದು ಕೆಲಸ ಮಾಡಿಸಲಾಗುವುದು. ಇದಕ್ಕೆ ಗ್ರಾಮಸ್ಥರ ಸಹಕಾರವನ್ನು ನಿರೀಕ್ಷಿಸುತ್ತೇನೆ. ಜತೆಗೆ ತಾಲೂಕಿನ ಅಭಿವೃದ್ಧಿಗೆ ನನ್ನದೇ ಆದ ಆಲೋಚನೆಗಳನ್ನು ಹೊಂದಿದ್ದು ಅದರಂತೆ ಅಭಿವೃದ್ಧಿ ಕೆಲಸ ಮಾಡಿಸಲಾಗುವುದು ಎಂದರು.
ಗ್ರಾಪಂ ಅಧ್ಯಕ್ಷ ಚೇತನ್, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣೇಗೌಡ, ಗ್ರಾಮದ ಮುಖಂಡರಾದ ರಮೇಶ್, ಸುಂದರೇಶ್, ಯುವರಾಜು, ಯೋಗೀಶ್‌ಗೌಡ, ಸಂಪತ್, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ವಾಸು, ರೇವತಿ ಸೇರಿದಂತೆ ಇತರರಿದ್ದರು.