

ಪಾಂಡವಪುರ: ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ನಾಯಿಗಳನ್ನು ಹಿಡಿದು ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ತಿಳಿಸಿದರು.
ಕೇಂದ್ರ ಸರ್ಕಾರದ ಆದೇಶದಂತೆ ಬೀದಿ ನಾಯಿಗಳನ್ನು ಹಿಡಿದು ಸಂತಾನಸಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಲು ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಕರೆಯಲಾಗಿದೆ. ಆಸಕ್ತ ಗುತ್ತಿಗೆದಾರರು, ಏಜೆನ್ಸಿ ಅಥವಾ ಎನ್‌ಜಿಒಗಳು ಟೆಂಡರ್‌ನಲ್ಲಿ ಭಾಗವಹಿಸಬಹುದಾಗಿದೆ. ಈ ಹಿಂದೆ ಜೆಇಎಮ್ (ಜೆಮ್) ಪೋರ್ಟಲ್‌ನಲ್ಲಿ ಎರಡು ಬಾರಿ ಹಾಗೂ ಇ-ಪ್ರೊಕ್ಯೂರ್‌ಮೆಂಟ್‌ನಲ್ಲಿ ಎರಡು ಬಾರಿ ಟೆಂಡರ್ ಕರೆಯಲಾಗಿತ್ತು. ಆದರೆ, ಟೆಂಡರ್ ಪ್ರಕ್ರಿಯೆಯಲ್ಲಿ ಯಾರೊಬ್ಬರು ಭಾಗವಹಿಸಲಿಲ್ಲ. ಹೀಗಾಗಿ ಮತ್ತೊಮ್ಮೆ ಟೆಂಡರ್ ಕರೆಯಲಾಗಿದ್ದು, ಆಸಕ್ತರು ಸೆ.15 ಮಧ್ಯಾಹ್ನ 2 ಗಂಟೆಯೊಳಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಟೆಂಡರ್ ಬಿಡ್ ಅನ್ನು ಅದೇ ದಿನ ಸಂಜೆ 5.30ರ ನಂತರ ತೆರೆಯಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೀದಿ ನಾಯಿಗಳ ಹಾವಳಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ನಾಯಿಗಳ ದಾಳಿಯಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳಿಗೂ ತೊಂದರೆಯಾಗುತ್ತಿದೆ. ಹೀಗಾಗಿ, ಸರ್ಕಾರದ ನಿರ್ದೇಶನದಂತೆ ನಾಯಿಗಳನ್ನು ಹಿಡಿದು ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಿ ವಾಪಸ್ ಅದೇ ಸ್ಥಳಕ್ಕೆ ಬಿಡಲು ಟೆಂಡರ್ ಕರೆಯಲಾಗಿದೆ. ಇದರಿಂದ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಬಹುದಾಗಿದೆ ಎಂದು ಹೇಳಿದರು. ಈ ವೇಳೆ ಪರಿಸರ ಇಂಜಿನಿಯರ್ ಶಫಿನಾಜ್ ಇದ್ದರು.