

ಹುಬ್ಬಳ್ಳಿ : ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕೆಂಬ ಉದ್ದೇಶದಿಂದಲೇ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಎಐಸಿಸಿ ಒಬಿಸಿ ಸಲಹಾ ಮಂಡಳಿ ಸದಸ್ಯರನ್ನಾಗಿ ನೇಮಿಸಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಮೂಲಕ ರಾಜ್ಯದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿಯ ವಿವಾದಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಪರದಾಡುತ್ತಿದೆ. ಜನರ ತೆರಿಗೆ ಹಣದ ದುರುಪಯೋಗ ಮಾಡುತ್ತಿದೆ. ರಾಜ್ಯದ ಮಹಿಳೆಯರು ಸೇರಿ ಎಲ್ಲ ವರ್ಗದ ಜನರು ಗ್ಯಾರಂಟಿ ಯೋಜನೆಗಳಿಂದ ಬೇಸತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವಂತೆ ಜನರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ ಬೊಕ್ಕಸ ಬರಿದಾಗಿದ್ದಲ್ಲದೇ, ಸಾಲವೂ ವಿಪರೀತವಾಗಿದೆ ಎಂದರು.