

ಹೊಸಪೇಟೆ: ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ವಿಷಯಗಳನ್ನು ಬೋಧನೆಯಲ್ಲಿ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ನಾಗರಾಜ ಹವಾಲ್ದಾರ್ ಹೇಳಿದರು.
ವಿಜಯನಗರ ಜಿಲ್ಲಾ ಕನ್ನಡ ವೇದಿಕೆಯಿಂದ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲಾ ಶಿಕ್ಷಣ(ಪದವಿ ಪೂರ್ವ) ಉಪನ್ಯಾಸಕರಿಗೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಪದವಿಪೂರ್ವ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ವಿವಿಧ ರೀತಿಯ ಬದಲಾವಣೆಯನ್ನು ಇಲಾಖೆ ತಂದಿದೆ. ಪ್ರಶ್ನೆಪತ್ರಿಕೆಯ ಸ್ವರೂಪ ಬದಲಾಗಿದ್ದು, ಉಪನ್ಯಾಸಕರು ಈ ನಿಟ್ಟಿನಲ್ಲಿ ಚರ್ಚಿಸಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಜೆ.ಸಿದ್ರಾಮ್ ಮಾತನಾಡಿ, ಪಠ್ಯಕ್ಕೆ ಸಂಬಂಧಿಸಿದ ಪ್ರಾಜೆಕ್ಟ್ ವರ್ಕ್ ಹಾಗೂ ಅಸೈನ್ಮೆಂಟ್‌ಗಳನ್ನು ಕೂಲಂಕಷವಾಗಿ ಚರ್ಚಿಸಿ ಉತ್ತಮ ವಿಷಯಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳ ಜಾಣ್ಮೆ, ಕೌಶಲ ಹೆಚ್ಚಿಸುವ ರೀತಿಯಲ್ಲಿ ಕಾರ್ಯಾಗಾರದಲ್ಲಿ ವಿಷಯಗಳನ್ನು ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದರು.