

ಶಿವಮೊಗ್ಗ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕೆಲವರಿಂದ ದೇಶದ ಅಸ್ಮಿತೆಯನ್ನು ಭಗ್ನಗೊಳಿಸುವ ಕೆಲಸ ನಡೆಯುತ್ತಿತ್ತು. ಅಂತಹ ಸಂದರ್ಭ ದೇಶಕ್ಕೆ ಶಕ್ತಿ ತುಂಬಿದ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕಾರ್ಯಕರ್ತರು ಕಂಕಣಬದ್ಧರಾಗಬೇಕಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ರಾಜ್ಯ ಒಕ್ಕಲಿಗ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ, ರೈತ ಮುಖಂಡ ಸಂತೋಷ್ ಗೌಡ ಹಲವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾ.18ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇದು ಮೊದಲ ಬಾರಿ ಅಲ್ಲ. ನಾನಾ ಕಾರಣಕ್ಕೆ ಹಲವು ಬಾರಿ ಬಂದು ಹೋಗಿದ್ದಾರೆ. ಆದರೂ ಈ ಬಾರಿ ಹೆಚ್ಚು ಜನರನ್ನು ಸೇರಿಸುವ ಮೂಲಕ ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.
ಮಾಜಿ ಎಂಎಲ್ಸಿ ಆರ್.ಕೆ.ಸಿದ್ದರಾಮಣ್ಣ, ರಾಜ್ಯ ಒಕ್ಕಲಿಗ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಮಾಲತೇಶ್, ನಗರ ಅಧ್ಯಕ್ಷ ಮೋಹನ್‌ಕುಮಾರ್ ಉಪಸ್ಥಿತರಿದ್ದರು.