

ಬೆಂಗಳೂರು: ಮುಂಗಾರು ಮತ್ತೆ ಪ್ರಬಲಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮುಂದಿನ 4 ದಿನ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಕೋಲಾರದ ರಾಯಲ್ಪಾಡು, ಶಿವಮೊಗ್ಗದ ಆಗುಂಬೆ, ಬೆಂಗಳೂರು ನಗರದ ಜಿಕೆವಿಕೆ, ಹೆಸರಘಟ್ಟ,ಮಂಡ್ಯದ ಕೃಷ್ಣರಾಜಪೇಟೆ, ಬೆಂ.ಗ್ರಾಮಾಂತರದ ಹೊಸಕೋಟೆ, ಚಿಕ್ಕಬಳ್ಳಾಪುರದ ಗೌರಿಬಿದನೂರು ಮತ್ತು ದಕ್ಷಿಣ ಕನ್ನಡದ ಧರ್ಮಸ್ಥಳ ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ 50ರಿಂದ 60 ಮಿಮೀ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ತುಮಕೂರಿನಲ್ಲಿ ಆ.5ರಿಂದ ಆ.8ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಕರಾವಳಿ ಸಮುದ್ರ ತೀರದಲ್ಲಿ ಗಂಟೆಗೆ 60 ಕಿ.ಮೀ.ವೇಗದಲ್ಲಿ ಬಿರುಗಾಳಿ ಬೀಸಲಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರದಲ್ಲಿ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆ.7ರಿಂದ ಮುಂದಿನ 2 ಹಾಗೂ ಕೊಪ್ಪಳ,ವಿಜಯಪುರದಲ್ಲಿ ಆ.8ರಂದು ಯೆಲ್ಲೋ ಅಲರ್ಟ್ ಇರಲಿದೆ.