ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ

ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ
Published on

ನಾಪೋಕ್ಲು: ಉತ್ತಮ ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್.ಬಿ ಅಪ್ಪಾಜಿಗೌಡ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಶುಕ್ರವಾರ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅಕ್ಷರಸ್ಥರಾದರೆ ಸಾಲದು, ವಿದ್ಯಾವಂತರಾಗಬೇಕು. ವಿದ್ಯಾವಂತರಾದಾಗ ಮಾನವೀಯ ಅಂತ:ಕರಣ ಬೆಳೆಯುತ್ತದೆ. ಯುವ ಜನತೆ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸದೃಢ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.

ಕೊಡಗು ವೈದ್ಯಕೀಯ ಕಾಲೇಜಿನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಮೇರಿ ಚಿಟ್ಟಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ರೂಢಿಸಿಕೊಂಡು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರಸ್ತುತ ದಿನಮಾನದಲ್ಲಿ ಕನ್ನಡ ಭಾಷೆಯ ಜತೆಗೆ ಇಂಗ್ಲಿಷ್ ಭಾಷೆ ಕಲಿಯುವುದು ಅನಿವಾರ್ಯವಾಗಿದೆ. ಸಂವಹನಕ್ಕೆ ಹಾಗೂ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಆಂಗ್ಲ ಭಾಷೆ ಅಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕಾವೇರಿ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡಿದರೆ ಮಾತ್ರ ಕಾಲೇಜು ಅಭಿವೃದ್ಧಿ ಹೊಂದಲು ಸಾಧ್ಯ. ಸಮಾಜದಲ್ಲಿ ಸೇವೆ ಮಾಡಲು ಮನಸ್ಸು ತೆರೆದುಕೊಳ್ಳಬೇಕು. ಮನಸ್ಸು ತೆರೆದುಕೊಂಡಾಗ ಸೇವೆಮಾಡಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ಗಿಡನೆಡಲಾಯಿತು. ಕಾರ್ಯಕ್ರಮದಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಪದ್ಮಾವತಿ, ಮುಕ್ಕಾಟಿರ ಪದ್ಮಾ ಗಣಪತಿ, ರಾಜು ದೇವಯ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಂಚಾಲಕ ಎಲ್.ಸಿ ರಂಗಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಶಿವರಾಜ್ ಕುಮಾರ್, ಸಹಾಯಕ ಪ್ರಾಧ್ಯಾಪಕ ಮನೋಜ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿ ಮೊಹಮ್ಮದ್ ಶಮಿಮ್, ಕೆ.ಎಚ್. ನಿಷ್ಮಾ, ಎಂ.ವಿ.ಇರ್ಫಾನ್, ಎಂ.ಐ. ರಕ್ಷತಾ, ಬಿ.ಪಿ ನಿತಿನ್, ಎಂ.ವಿ.ಕೀರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net