

ಸಿಂಧನೂರು; ವಿದ್ಯಾರ್ಥಿ ವೇತನ ಬಿಡುಗಡೆ, ವಸತಿ ನಿಲಯಗಳಿಗೆ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಅನುದಾನ ಮರಳಿ ಹೋದರೆ ಅಧಿಕಾರಿಗಳ ವೇತನಕ್ಕೆ ಕತ್ತರಿ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿ ವಸತಿ ನಿಲಯಗಳಿಗೆ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈಗಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳಿಲ್ಲ. ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣ ಮಾಡುತ್ತಿಲ್ಲ.
ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ನಂಬಿ ಶಿಕ್ಷಣ ಪಡೆಯುತ್ತಿದ್ದು ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಶಿಕ್ಷಣ ಮೊಟಕುಗೊಳಿಸುವ ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ತ್ವರಿತವಾಗಿ ಪೂರ್ಣಗೊಳಿಸಿ ಪ್ರವೇಶಾತಿ ನೀಡಬೇಕು. ವಸತಿ ನಿಲಯ ವಿದ್ಯಾರ್ಥಿಗಳಿಗೆ ನೀಡುವ ಕಿಟ್ ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರತಿ ವಿದ್ಯಾರ್ಥಿಯ ಊಟಕ್ಕೆ ನೀಡುವ 1850 ರೂ. ಕಡಿಮೆಯಾಗಿದ್ದು, ಮೊತ್ತ ಹೆಚ್ಚಿಸಬೇಕು.
ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕೆಂದು ಒತ್ತಾಯಿಸಿದರು. ನಂತರ ಉಪತಹಸೀಲ್ದಾರ್ ಚಂದ್ರಶೇಖರಗೆ ಮನವಿ ಸಲ್ಲಿಸಿದರು.
ಎಬಿವಿಪಿ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ, ರಾಜ್ಯ ಕಾರ್ಯಕಾರಿ ಸದಸ್ಯ ಪ್ರದೀಪ್ ಪಾಟೀಲ್, ನಗರ ಸಹ ಕಾರ್ಯದರ್ಶಿ ವೀರಭದ್ರಸ್ವಾಮಿ, ಸಹ ಕಾರ್ಯದರ್ಶಿ ಮುದಿಯಪ್ಪ, ಪ್ರಶಾಂತ ಇದ್ದರು.