

ಹಿರಿಯೂರು: ಪದವಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಬದ್ಧತೆ, ಮಾನವೀಯ ಮೌಲ್ಯ, ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಯೋಜನೆ ಘಟಕಗಳ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದರು.
ಹೆತ್ತವರ ತ್ಯಾಗ, ಕನಸು ನನಸಾಗಿಸಲು ಸ್ಪಷ್ಟ ಗುರಿಯೊಂದಿಗೆ ಸಾಧನೆ ಮಾಡಿ, ಸಮಾಜಕ್ಕೆ ಮಾದರಿಯಾಗಬೇಕು ಎಂದ ಅವರು, ಗುಣಮಟ್ಟದ ಶಿಕ್ಷಣ ಉತ್ತಮ ಭವಿಷ್ಯಕ್ಕೆ ಭದ್ರ ಬುನಾದಿ ಎಂದರು.
ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ 4.20 ಕೋಟಿ ರೂ. ಅನುದಾನ ನೀಡಿದ್ದು, ಶೈಕ್ಷಣಿಕ-ಸಾಂಸ್ಕೃತಿಕ ಚಟುವಟಿಕೆಗಳಿಗೆ ನೆರವಾಗಲು ಸುಸಜ್ಜಿತ ಸಭಾಂಗಣ, ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್‌ಕುಮಾರ್ ಮಾತನಾಡಿ, ಹಿರಿಯೂರಿನ ಸರ್ವಾಂಗೀಣ ಅಭಿವೃದ್ಧಿ ಜತೆ ಶಿಕ್ಷಣ ಕಾಶಿಯಾಗಿಸಲು ಸಚಿವರು ದಿಟ್ಟ ಹೆಜ್ಜೆ ಇಟ್ಟಿದ್ದು, ಪದವಿ ಹಂತದ ವಿದ್ಯಾರ್ಥಿಗಳು ರೀಲ್ಸ್, ಮೊಬೈಲ್, ಸಾಮಾಜಿಕ ಜಾಲತಾಣ ಅತಿಯಾದ ಬಳಕೆಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.
ಪ್ರಾಚಾರ್ಯ ಡಾ. ಮಹೇಶ್ ಮಾತನಾಡಿ, ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಫಲಿತಾಂಶ ನಿರೀಕ್ಷಿಸಲು ಸಾಧ್ಯ. ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶ ನೀಡದೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದರಿಂದ ಪ್ರತಿವರ್ಷ ಕಾಲೇಜಿನ ವಿದ್ಯಾಥಿಗಳು ರ‌್ಯಾಂಕ್ ಪಡೆದು ತಾಲೂಕಿನ ಕೀರ್ತಿ ಪತಾಕೆ ಹಾರಿಸಿದ್ದಾರೆ ಎಂದು ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ-ದ್ವಿತೀಯ ರ‌್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.