ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​

BVB College
Published on

ಹುಬ್ಬಳ್ಳಿ: ಕಾಲೇಜಿನೊಳಗೆ ನುಗ್ಗಿ ಯುವಕನೋರ್ವ ವಿದ್ಯಾರ್ಥಿ ಒಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯೂ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಎಂದು ಗುರುತಿಸಲಾಗಿದೆ.

Neha Hiremat

ಈ ಕುರಿತು ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಾಸ್ಕ್​ ಧರಿಸಿದ್ದ ವ್ಯಕ್ತಿಯೋರ್ವ ಕಾಲೇಜಿನೊಳಗೆ ಏಕಾಏಕಿ ನುಗ್ಗಿದ್ದು, ನೇಹಾ ಹಿರೇಮಠ್​ ಮೇಲೆ ದಾಳಿ ಮಾಡಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಘಟನೆ ಸಂಬಂಧ ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿನಿಯ ಮೃತದೇಹವನ್ನು ಕಿಮ್ಸ್​ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net