

ಆಲೂರು : ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಓದಿನಲ್ಲಿ ಯಶಸ್ಸು ಸಾಧಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಸರ್ಕಾರದ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮ್ ಜಿ ಫೌಂಡೇಷನ್ ವತಿಯಿಂದ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ವಾರದಲ್ಲಿ ಎರಡು ದಿನ ಮೊಟ್ಟೆ ನೀಡುವ ಕಾರ್ಯಕ್ರಮವನ್ನು ನಾಲ್ಕು ದಿನಕ್ಕೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಜೀಂ ಪ್ರೇಮ್‌ಜಿ ಫೌಂಡೇಷನ್ ತಮ್ಮ ಸಿಎಸ್‌ಆರ್ ಅನುದಾನದಲ್ಲಿ ಸುಮಾರು 1591 ಕೋಟಿ ರೂ. ನೀಡುವ ಮೂಲಕ ಮುಂದಿನ ಮೂರು ವರ್ಷಗಳಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಗೆ ಸಹಕಾರ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಗೌಡ ಮಾತನಾಡಿದರು. ಮಲ್ಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಪರಮೇಶ್, ಶಾಲೆಯ ಮುಖ್ಯ ಶಿಕ್ಷಕಿ ನಾಗರತ್ನ, ಇಸಿಒಗಳಾದ ಮಂಜುಳಾ, ಕಿರಣ್, ತಿಮ್ಮಶೆಟ್ಟಿ, ಸಿಆರ್‌ಪಿ ಮೈಮುನಾ ಇತರರು ಇದ್ದರು.