ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಿ: ಕೆ.ರಾಮರಾಜನ್

k ramarajan news
Published on

ಮಡಿಕೇರಿ: ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಶತತ ಪ್ರಯತ್ನ ಮತ್ತು ಪೂರ್ವ ಸಿದ್ಧತೆ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರತಿಪಾದಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆ ಅತೀಮುಖ್ಯ. ಆದ್ದರಿಂದ ಇವುಗಳನ್ನು ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು. ಇಂದಿನ ಆಧುನಿಕ ಯುಗದಲ್ಲಿ ಅವಕಾಶಗಳು ಬಹಳಷ್ಟು ಇದ್ದು, ಅವುಗಳನ್ನು ಇಚ್ಛಾಶಕ್ತಿಯಿಂದ ಬಳಸಿಕೊಳ್ಳಬೇಕು. ಆ ದಿಸೆಯಲ್ಲಿ ಗುರಿ ಮತ್ತು ಉದ್ದೇಶ ಇರಬೇಕು ಎಂದರು.

ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಳ್ಳಬೇಕು. ಸತತ ಪ್ರಯತ್ನ ಇದ್ದಲ್ಲಿ ಪ್ರಶಸ್ತಿ ಹಾಗೂ ಉದ್ಯೋಗ ದೊರೆಯಲಿದೆ. ಯುವ ವಯಸ್ಸಿನಲ್ಲಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಸಾಮಾನ್ಯ ಜ್ಞಾನ ಇರಬೇಕು. ಪ್ರಶಸ್ತಿ ಬೇಕಿದ್ದಲ್ಲಿ ಪ್ರಯತ್ನ ಅಗತ್ಯ. ಆ ನಿಟ್ಟಿನಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು ಯಶಸ್ಸುಗಳಿಸುವತ್ತ ಮುನ್ನಡೆಯಬೇಕು. ಪರಿಶ್ರಮ ಇದ್ದಲ್ಲಿ ಯಶಸ್ಸು ದೊರೆಯುತ್ತದೆ. ಆ ನಿಟ್ಟಿನಲ್ಲಿ ಯುವ ವಯಸ್ಸಿನಲ್ಲಿ ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಮಂಜುಳಾ ಮಾತನಾಡಿ, ಈ ಬಾರಿ ಪಿಯು ಪರೀಕ್ಷೆ ವೆಬ್‌ಕಾಸ್ಟಿಂಗ್ ಇರಲಿದ್ದು, ಮಾನಸಿಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿರಬೇಕು. ಕೊಡಗು ಜಿಲ್ಲೆ ಪಿಯು ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಪಿಯು ಪರೀಕ್ಷೆಗೆ ಇನ್ನು ಮೂರುವರೆ ತಿಂಗಳಿದ್ದು, ಪರೀಕ್ಷೆಯತ್ತ ಗಮನಹರಿಸಬೇಕು ಎಂದರು.

ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಹಾಗೂ ಕೊಡಗು ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಮಾತನಾಡಿ, ಪಿಯು ಪರೀಕ್ಷಾ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಇನ್ನೂ ಅತ್ಯುತ್ತಮ ಸ್ಥಾನ ಪಡೆಯಲು ಎಲ್ಲರೂ ಓದಿನ ಕಡೆ ಗಮನಹರಿಸಬೇಕು ಎಂದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್ ಮಾತನಾಡಿ, ಶಿಸ್ತಿನ ಜೊತೆಗೆ ತಾಳ್ಮೆ ಇರಬೇಕು. ಮರಳಿ ಪ್ರಯತ್ನ ಮಾಡಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದರು.

ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು ೪೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಭಾವಗೀತೆ, ಜಾನಪದ ಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು. ಯುವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ, ಕ್ರೀಡೆ ಹೀಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದರು.

ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಇರಬಾರದು ಎಂದು ವಿನಾಯಕ ನರ್ವಾಡೆ ಅವರು ತಿಳಿಸಿದರು.

ಸಮಾಜದಲ್ಲಿ ಕಾಲಕ್ಕೆ ತಕ್ಕಂತೆ ನಾವು ಬದಲಾವಣೆ ಹೊಂದುತ್ತಾ ಸ್ಪರ್ಧೆಯನ್ನು ಎದುರಿಸಿ ಛಲ ಸಾಧಿಸಬೇಕು. ಯಾವುದೇ ಕಾರಣಕ್ಕೂ ಧೃತಿಗೆಡಬಾರದು ಎಂದು ವಿನಾಯಕ ನರ್ವಾಡೆ ಅವರು ಸಲಹೆ ಮಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದೇರ್ಶಕಿ ಕೆ.ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಇಂತಹ ವೇದಿಕೆಗಳನ್ನು ಬಳಸಿಕೊಳ್ಳಬೇಕು. ಶಿಕ್ಷಣವು ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ಧಿಗೆ ಮುನ್ನುಡಿ ಎಂಬುದನ್ನು ಮರೆಯಬಾರದು ಎಂದು ಅವರು ಪ್ರತಿಪಾದಿಸಿದರು.

ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಎನ್.ಕೆ.ಜ್ಯೋತಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ಪಿ.ಚಂದ್ರಶೇಖರ ಮಾತನಾಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್, ಉಪನ್ಯಾಸಕರು, ವಿದ್ಯಾರ್ಥಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net