

ವಿಜಯವಾಣಿ ಸುದ್ದಿಜಾಲ ಹೆಬ್ರಿ
ನಮ್ಮ ಸಂಸ್ಕೃತಿಯ ಹಿರಿಮೆ ಉಳಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು. ವಾರ್ಷಿಕೋತ್ಸವದಲ್ಲಿ ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸಿ ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಅಮೋಘ ಎಂದು ಶಾಸಕ ಸುನೀಲ್‌ಕುಮಾರ್ ಹೇಳಿದರು.
ಇತ್ತೀಚೆಗೆ ನಡೆದ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ರಾಜಶೇಖರ್ ಹೆಬ್ಬಾರ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ನಿರ್ದಿಷ್ಟ ಗುರಿ ಹೊಂದಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ, ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾಗರಾಜ ಶೆಟ್ಟಿ, ಐಕ್ಯೂಎಸಿ ಸಂಚಾಲಕ ಡಾ.ಗಣೇಶ್ ಎಸ್., ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿಗಳಾದ ಪ್ರಮೋದ್, ಆಕರ್ಷ, ಭುವಿಜ್, ರಕ್ಷಿತಾ, ಶ್ವೇತಾ, ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿ ಸಲಹೆಗಾರರಾದ ಶ್ರೀನಿವಾಸ್ ನಾಯಕ್, ಅಕ್ಷಯ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಪ್ರವೀಣ್ ಕುಮಾರ್ ಎಸ್. ಸ್ವಾಗತಿಸಿದರು. ಅಕ್ಷತಾ ವಂದಿಸಿದರು. ಶ್ರೇಯಾ ಮತ್ತು ರಕ್ಷಿತ್ ನಿರೂಪಿಸಿದರು.