

ಹಾವೇರಿ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಎಐಡಿಎಸ್ಒ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.
ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಜಿಲ್ಲಾಡಳಿತ ಭವನಕ್ಕೆ ಬಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಜಾರಿಗೊಳಿಸಿರುವುದು ಸ್ವಾಗತಾರ್ಹ. ಇದರೊಂದಿಗೆ ತಾಂತ್ರಿಕ ಶಿಕ್ಷಣ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ನೀಡಬೇಕು. ರಾಜ್ಯದಲ್ಲಿ 12 ಇಂಜಿನಿಯರಿಂಗ್ ಕಾಲೇಜ್ಗಳಿದ್ದು, ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅವಶ್ಯಕವಾಗಿದೆ. ಸರ್ಕಾರಿ ಕಾಲೇಜ್ನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅಗತ್ಯವಾಗಿದೆ. ಸರ್ಕಾರಿ ಕಾಲೇಜ್ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಡ ಮತ್ತು ಮಧ್ಯಮ ವರ್ಗದವರೇ ಆಗಿದ್ದಾರೆ. ಲ್ಯಾಪ್ಟಾಪ್ ಇಲ್ಲದೇ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳಿಗೂ ರಾಜ್ಯ ಸರ್ಕಾರ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಬೇಕು. ಕೂಡಲೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಮುಖಂಡರಾದ ಮಾಲತೇಶ, ತಿಪ್ಪೇಸ್ವಾಮಿ, ಶಿವಪ್ರತಾಪ, ವಿದ್ಯಾರ್ಥಿಗಳಾದ ಅಕ್ಷಯ, ಮುತ್ತಪ್ಪ ಹುಲಿಗೇಶ, ಗಣೇಶ, ನಯನಾ ಸೇರಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು.