

ಚಾಮರಾಜನಗರ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ 8 ಘಂಟೆ ಸುಮಾರಿಗೆ KSRTC ಬಸ್ ಸ್ಟ್ಯಾಂಡ್ ಮುಂಭಾಗ ಜಮಾಯಿಸಿದ ವಿದ್ಯಾರ್ಥಿಗಳ ಗುಂಪು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.
ಈ ಹಿಂದೆ ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ 5ಕ್ಕೂ ಹೆಚ್ಚು ಬಾರಿ ಪ್ರತಿಭಟನೆ ನಡೆಸಿ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದರು. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಇದುವರೆಗೂ ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದಕ್ಕೆ ಮತ್ತೊಮ್ಮೆ ಪ್ರತಿಭಟನೆ ನಡೆಸಿದ್ಧಾರೆ.
ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಇದರಲ್ಲಿ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಘೊಷಿಸಿದೆ. ಈ ನಿಟ್ಟಿನಲ್ಲಿ ಅಜ್ಜಿಪುರ, ರಾಮಾಪುರ, ಬೈಲೂರು -ಒಡೆಯರಪಾಳ್ಯ, ಪಿ ಜಿ ಪಾಳ್ಯ, ಬಂಡಳ್ಳಿ ಮಾರ್ಗವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಕ್ರಿಯಿಸಿರುವ ಹನೂರು ಶಾಸಕ ಎಂ.ಆರ್. ಮಂಜುನಾಥ್ ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸುವಂತೆ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಈ ಭಾಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ KSRTC ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಬಳಿಕ ಹನೂರು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ಧಾರೆ.