

ಹನೂರು: ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಪರಿಸರ ಸರಂಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕ್ರಿಸ್ತರಾಜ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ಫಾದರ್ ರೋಷನ್ ತಿಳಿಸಿದರು.
ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಪರಿಸರದ ಬಗ್ಗೆ ಅರಿವು ಮೂಡಿಸುವ ಸಂಬಂಧ ಗ್ರೀನ್ ಕ್ಯಾಂಪಸ್, ಕ್ಲೀನ್ ಕ್ಯಾಂಪಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮನುಷ್ಯ ಕೆಲಸದ ಒತ್ತಡದಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾನೆ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮ ಆರೋಗ್ಯದ ಕಡೆ ಗಮನಹರಿಸಬೇಕಿದೆ. ಇದಕ್ಕೆ ಹಸಿರು ಪರಿಸರ ಸಹಕಾರಿಯಾಗಲಿದೆ. ಈ ದೆಸೆಯಲ್ಲಿ ನಮ್ಮ ಸಂಸ್ಥೆಯು ಹಸಿರೀಕರಣಕ್ಕೆ ಹೆಚ್ಚಿನ ಒತ್ತನ್ನು ನೀಡುವುದರ ಜತೆಗೆ ಸ್ವಚ್ಛತೆಯನ್ನು ಕಾಪಾಡಲಾಗುತ್ತಿದೆ. ಉತ್ತಮ ಪರಿಸರದಿಂದ ಶುದ್ಧ ಗಾಳಿ ದೊರಕುತ್ತಿದೆ. ಆದ್ದರಿಂದ ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಯೊಬ್ಬರೂ ಸ್ವಚ್ಛಂದ ಪರಿಸರದ ಕಡೆ ಗಮನ ನೀಡಬೇಕು ಎಂದು ತಿಳಿಸಿದರು.
ಆರ್‌ಎಫ್‌ಒ ಉಮಾಪತಿ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ. ಹಾಗಾಗಿ ಪ್ರತಿಯೊಬ್ಬರೂ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ದೆಸೆಯಲ್ಲಿ ಶಾಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದರು.
ಬಳಿಕ ಪರಿಸರ ಅರಿವು ಕುರಿತು ವಿದ್ಯಾರ್ಥಿಗಳು ಜಾಥಾ ನಡೆಸಿದರು. ನೃತ್ಯ, ನಾಟಕ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಶಾಂತಿ, ಮುಖ್ಯಶಿಕ್ಷಕರಾದ ಸುಬ್ರಹ್ಮಣ್ಯ, ಸಿಸ್ಟರ್ ಜೆಸಿಂತಾ, ಪುಷ್ಪ, ಉಪನ್ಯಾಸಕರು ಹಾಗೂ ಶಿಕ್ಷಕರು ಇದ್ದರು.