ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಲಿ

19manju6
Published on

ಮಲ್ಲೂರ: ಎಲ್ಲ ವರ್ಗದ ಮಕ್ಕಳಿಗೆ ಶಿಕ್ಷಣ ಸಿಗಲೆಂದು ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯ ಕಲ್ಪಿಸುತ್ತಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೈಲಹೊಂಗಲ ತಾಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಸವದತ್ತಿ ತಾಲೂಕಿನ ಕೆಪಿಎಸ್ ಯಕ್ಕುಂಡಿ ಗ್ರಾಮದಲ್ಲಿ ಶಾಲೆಗಳ ಹೋಬಳಿ ಮಟ್ಟದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಶಾಲೆಯ ಅಭಿವೃದ್ಧಿಯಲ್ಲಿ ಪಾಲಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಹಳೆಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದರು. ಪ್ರತಿಯೊಬ್ಬರೂ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸುವ ಮೂಲಕ ಶಾಲೆಗಳ ಉಳಿವಿಗೆ ಕೈಜೋಡಿಸಬೇಕು. ಸರ್ಕಾರ ಸಾಕಷ್ಟು ಯೋಜನೆಗಳನ್ನು ತಂದು ಶಿಕ್ಷಣ ನೀಡುತ್ತಿದೆ ಎಂದರು.

ಬಿಇಒ ಮೋಹನ ದಂಡಿನ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜತೆಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಸ್ಕಾಲರ್‌ಶಿಪ್, ಶೂ ಮತ್ತು ಸಾಕ್ಸ್ ಸೇರಿ ಮುಂತಾದ ಉಚಿತ ಸೌಲಭ್ಯ ಒದಗಿಸಲಾಗುತ್ತಿದ್ದು, ಪ್ರಯೋಜನ ಪಡೆಯಬೇಕು ಎಂದರು. ಸಿಆರ್‌ಪಿ ಆರ್.ಎಸ್.ಮುರಗೋಡ, ಅಜೀಂ ಪ್ರೇಮ್‌ಜಿ ಫೌಂಡೇಷನ್‌ನ ಶಿವಾನಂದ ಕಂಬಾರ, ಶಿವಾನಂದ ಸುರಕೋಡ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಮೈತ್ರಾದೇವಿ ವಸ್ತ್ರದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net