ನೇತಾಜಿ ಆದರ್ಶಗಳನ್ನು ರೂಢಿಸಿಕೊಳ್ಳಿ ; ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ್ ಸಲಹೆ

23CBP3
Published on

ಚಿಕ್ಕಬಳ್ಳಾಪುರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನೇತಾಜಿಯ ಆದರ್ಶ ಗುಣಗಳನ್ನು ರೂಢಿಸಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ್ ಸಲಹೆ ನೀಡಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾನುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ 125 ನೇ ಜನ್ಮದಿನೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪರಾಕ್ರಮ ದಿನಾಚರಣೆಯಲ್ಲಿ ಮಾತನಾಡಿದರು. ನೇತಾಜಿ ಎಂತಲೇ ಕರೆಸಿಕೊಂಡಿದ್ದ ಸುಭಾಷ್ ಚಂದ್ರಬೋಸ್ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಜನನಾಯಕರಲ್ಲಿ ಅಗ್ರಗಣ್ಯರು. ಸ್ವಾಮಿ ವಿವೇಕಾನಂದರ ಆದರ್ಶ ವಿಚಾರಗಳಿಂದ ಪ್ರಭಾವಿತರಾಗಿ, ಪ್ರಾಣದ ಹಂಗು ತೊರೆದು ಹೋರಾಡಿದರು ಎಂದು ಬಣ್ಣಿಸಿದರು.

ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ ಎಂಬ ಸಂದೇಶದೊಂದಿಗೆ ಸ್ವಾತಂತ್ರ್ಯ ಚಳವಳಿಯ ಜನರಲ್ಲಿ ಸ್ಫೂರ್ತಿ ತುಂಬಿದರು. ಅವರ ಸಿಡಿಲಬ್ಬರದ ಮಾತಿಗೆ ಪ್ರತಿಯೊಬ್ಬರಲ್ಲೂ ದೇಶ ಪ್ರೇಮದ ಕಿಚ್ಚು ಜಾಗೃತವಾಗುತ್ತಿತ್ತು ಎಂದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷ ಸಮೀವುಲ್ಲಾ, ಉಪಾಧ್ಯಕ್ಷ ನವಾಜ್ ಪಾಷಾ, ಹನುಮಂತಪ್ಪ, ನಗರಸಭೆ ಸದಸ್ಯ ಕಣಿತಹಳ್ಳಿ ವೆಂಕಟೇಶ್, ವಿಜಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net