

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ವ್ಯಾಪ್ತಿಯ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಸೂಚನೆ ಉಲ್ಲಂಘಿಸಿದರೆ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024-25ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯನಿರ್ವಹಿಸಿ. ಜತೆಗೆ ರೈತರಿಗೆ ಸಕಾಲದಲ್ಲಿ ಎಫ್‌ಆರ್‌ಪಿ ಪ್ರಕಾರ 14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ. ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯ ಎಂದರು.
ಮೈಷುಗರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಮೈಷುಗರ್ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಐಸಿಎಲ್, ಚಾಂಷುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಕಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಷುಗರ್ ವ್ಯಾಪ್ತಿಯ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಚೆಸ್ಕಾಂ ಅಧ್ಯಕ್ಷ ಎ.ಬಿ.ರಮೇಶ ಬಂಡಿಸಿದ್ದೇಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣಕುಮಾರ್, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.