ಮೀಸಲಾತಿ ನಿರ್ಧಾರದಿಂದ ಹಿಂದೆ ಸರಿಯಬೇಡಿ: ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್ ಒತ್ತಾಯ

Sugarcane Growers Union press conference Mandya
Published on

ಮಂಡ್ಯ: ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ಒತ್ತಾಯಿಸಿದರು.

ರಾಜ್ಯ ಸರ್ಕಾರದ ತೀರ್ಮಾನದಿಂದ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧೇಯಕ ಮಂಡಿಸಿ ಅಂಗೀಕರಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವಲಯಗಳಲ್ಲಿ ಶೇ.70ರಷ್ಟು ಹಾಗೂ ಎ ಮತ್ತು ಬಿ ಹುದ್ದೆಗಳಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸಮಂಜಸವಾಗಿದೆ. ಆದರೆ ಕಾರಣಾಂತರಗಳಿಂದ ಈ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದು ಕಂಡುಬಂದಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಈ ದಿಟ್ಟ ಕ್ರಮದಿಂದ ಸರ್ಕಾರ ಹಿಂದೆ ಸರಿಯಬಾರದು ಎಂದರು.

ಅಪ್ರೆಂಟಿಸ್ ಮತ್ತು ಇಂಟರ್‌ಶಿಪ್ ತರಬೇತಿ ನೀಡಬೇಕು ಎನ್ನುತ್ತಿದ್ದಾರೆ. ಆದರೆ ಅದನ್ನು ಕಂಪನಿಗಳೇ ನೀಡಬಹುದು. ನಮ್ಮ ನೆಲ, ಜಲ ಬಳಕೆ ಮಾಡಿಕೊಂಡು ಕೆಲಸ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕನ್ನಡಿಗರಿಗೆ ಸಿಗುವ ಸೌಲಭ್ಯವನ್ನು ಸರ್ಕಾರ ಕಾರ್ಯರೂಪಕ್ಕೆ ತರಬೇಕು ಎಂದು ತಾಕೀತು ಮಾಡಿದರು.

ಒಕ್ಕೂಟದ ಗೌರವಾಧ್ಯಕ್ಷ ಎಸ್.ಕೃಷ್ಣ, ಶಿವಲಿಂಗಯ್ಯ, ಎಂ.ಸಿ.ರಮೇಶ್, ಮಂಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net