ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಂಧಿತರು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ

suhas shetty
Published on

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತ 8 ಮಂದಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮೇ 9ರ ತನಕ ಕಸ್ಟಡಿಗೆ ಪಡೆದಿದ್ದಾರೆ.

ಪ್ರಮುಖ ಆರೋಪಿ ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ಸಹಚರರಾದ ಬಜಪೆ ಶಾಂತಿಗುಡ್ಡೆಯ ನಿವಾಸಿಗಳಾದ ನಿಯಾಜ್ (25), ಮೊಹಮ್ಮದ್ ಮುಸಮ್ಮೀರ್ (32), ಕಳವಾರು ಕುರ್ಸುಗುಡ್ಡೆಯ ಕಲಂದರ್ ಶಾಫಿ (29), ಬಾಳ ಮಂಗಳಪೇಟೆಯ ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆ ಗ್ರಾಮದ ಕೋಟೆಹೊಳೆಯ ನಾಗರಾಜ್ ಎಂ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆಯ ರಂಜಿತ್ (19) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ಪಡೆದಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರ ಬಂಧಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

* ಮುಂದುವರಿದ ಪೊಲೀಸ್ ಭದ್ರತೆ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆ ಭಾನುವಾರ ಬೆಳಗ್ಗೆ 6 ಗಂಟೆಗೆ ಕೊನೆಗೊಂಡಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಜೀವ ಬೆದರಿಕೆ ಸಂದೇಶಗಳು ಬರುತ್ತಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲೆಯ ಸೂಕ್ಷ್ಮ ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ. ಹೊರ ಜಿಲ್ಲೆಗಳಿಂದ ಆಗಮಿಸಿದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ತಪಾಸಣೆ ನಡೆಸಲಾಗುತ್ತಿದೆ. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net