ಆತ್ಮಹತ್ಯೆ ಸ್ವಾಸ್ಥ್ಯ ಸಮಾಜಕ್ಕೆ ಮಾರಕ: ಹಿರಿಯ ಸಿವಿಲ್ ನ್ಯಾಯಾಧೀಶೆ ಹೇಮಾಶ್ರೀ ಅಭಿಮತ

Suicide Prevention Day
Published on

ಮಂಡ್ಯ: ಸ್ವಾಸ್ಥ್ಯ ಸಮಾಜಕ್ಕೆ ಮಾರಕವಾಗಿರುವ ಆತ್ಮಹತ್ಯೆಯನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಎರಡನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶೆ ಹೇಮಾಶ್ರೀ ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶ್ವದಲ್ಲಿ ಪ್ರತಿವರ್ಷ 7 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ಪ್ರತಿವರ್ಷ 1.64 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಪೈಕಿ ಶೇ.35ರಷ್ಟು 15 ರಿಂದ 24 ವರ್ಷದ ವಯೋಮಾನದವರಾಗಿದ್ದಾರೆ. ಆದ್ದರಿಂದ ಆತ್ಮಹತ್ಯೆ ತಡೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹೆಚ್ಚು ನಡೆಯಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎಂ.ಸಿ.ಸೋಮಶೇಖರ್ ಮಾತನಾಡಿ, ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಅದನ್ನು ಎದುರಿಸಿ ನಿಂತಾಗ ನಮ್ಮ ಬದುಕು ಸುಗಮವಾಗುತ್ತದೆ. ಜಿಲ್ಲೆಯಲ್ಲಿ ಪ್ರತಿವರ್ಷ ಸಾವಿರಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ಕಂಡುಬರುತ್ತವೆ. ಈ ವರ್ಷ ಏಪ್ರಿಲ್ನಿಂದ ಆಗಸ್ಟ್‌ವರೆಗೆ 600 ಪ್ರಕರಣಗಳಾಗಿವೆ. ಇದಕ್ಕೆ ಕಾರಣ ಖಿನ್ನತೆ, ಕೌಟುಂಬಿಕ ಸಮಸ್ಯೆ, ಹದಿಹರೆಯದ ನಿರ್ಧಾರಗಳಾಗಿವೆ. ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಪ್ರತಿ ಇಲಾಖೆಯ ಸಹಯೋಗ ಪ್ರಮುಖವಾಗಿರುತ್ತದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಾಂತರಾಜ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ.ಕೆ.ಆರ್.ಶಶಿಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net