

ಬಳ್ಳಾರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಬೇಸಿಗೆ ಶಿಬಿರ ಅವಶ್ಯಕವಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅನುಕೂಲವಾಗಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಹೇಳಿದರು.
ನಗರದ ಕಂಟೋನ್‌ಮೆಂಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು ಮಾತನಾಡಿ, ಮಕ್ಕಳಲ್ಲಿ ವಿವಿಧ ಪ್ರತಿಭೆಯಿದ್ದು, ಸೂಕ್ತ ರೀತಿಯಲ್ಲಿ ಹೊರ ತರುವ ಕಾರ್ಯವಾಗಬೇಕು. ಬೆಂಗಳೂರಿನ ಬಾಲಭವನ ಸೊಸೈಟಿ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿರುವುದು ಮಕ್ಕಳಿಗೆ ಪ್ರೋತ್ಸಾಹ ನೀಡಲು ಸಹಕಾರಿಯಾಗಿದೆ ಎಂದರು. ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಪ್ರಶಂಸೆ ಪತ್ರ ವಿತರಿಸಲಾಯಿತು.