

ಮೈಸೂರು: ಜಿಲ್ಲಾ ಹಂತದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒಗೆ ವಹಿಸಿ, ಅಧಿಕಾರ ನೀಡಿ ಹೊರಡಿಸಿರುವ ಸುತ್ತೋಲೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೋಧಕೇತರ ಸಂಘದ ಸಹಯೋಗದಲ್ಲಿ ಪ್ರತಿಭಟನಾಕಾರರು, ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊಠಾರಿ ಆಯೋಗದ ಶಿಫಾರಸಿನಂತೆ +2 ಹಂತವನ್ನು ರಾಜ್ಯದಲ್ಲಿ ಅಳವಡಿಸುವ ಸಲುವಾಗಿ ಪಿ.ಮಲ್ಲಿಕಾರ್ಜುನಪ್ಪ ನೇತೃತ್ವದ ಸಮಿತಿ ನೀಡಿದ ವರದಿಯ ಆಧಾರದ ಮೇಲೆ 1971ರ ಜನವರಿಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಅಸ್ತಿತ್ವಕ್ಕೆ ಬಂದಿದೆ.
ಎಲ್ಲ ವರ್ಗದ ಬಡ ಮಕ್ಕಳಿಗೂ ಗುಣಾತ್ಮಕ ಮತ್ತು ಮೌಲಿಕ ಶಿಕ್ಷಣ ದೊರಕುವಂತಾಗಲಿ ಎಂಬ ಎಸ್.ಬಂಗಾರಪ್ಪ ಅವರ ಆಶಯದೊಂದಿಗೆ ರೂಪುಗೊಂಡ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗ ಮರಣಶಯ್ಯೆಯಲ್ಲಿದೆ. ಅವರ ಪುತ್ರ ಮಧು ಬಂಗಾರಪ್ಪನವರೇ ಇಲಾಖೆಯ ಸಚಿವರಾಗಿದ್ದರೂ ಇಲಾಖೆಯ ಶವಪೆಟ್ಟಿಗೆಗೆ ಮೊಳೆ ಹೊಡೆಯುತ್ತಿರುವುದು ಕಳವಳಕಾರಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ.ಪೂ.ಶಿ ಇಲಾಖೆಯನ್ನು ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಎಂದು ಹೆಸರು ಬದಲಿಸಲಾಗಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ಹಿಂದಿನಿಂದಲೂ ನಡೆಯುತ್ತಿದ್ದು, ಇದನ್ನು ಕೂಡಲೇ ಕೈ ಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಎಂಬ ಹೆಸರನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು, ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲೇ ಉಳಿಸಿ ಪರೀಕ್ಷಾ ಮೌಲ್ಯ, ಪಾವಿತ್ರ್ಯತೆ ಕಾಪಾಡಬೇಕು. ಪ್ರತಿಜಿಲ್ಲಾ ಹಂತಗಳಲ್ಲಿ ಪ.ಪೂ.ಶಿ ಇಲಾಖೆಯ ಮೇಲುಸ್ತುವಾರಿ ನಡೆಸುವ ಸಂಬಂಧ ಜಿಪಂ ಸಿಇಒ, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಅಧಿಕಾರ ನೀಡಲು ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಯಾವುದೇ ಶಿಕ್ಷಕರ ಸಂಘಟನೆಗಳ ಜತೆಗಾಗಲಿ, ಶಿಕ್ಷಣ ತಜ್ಞರೊಂದಿಗಾಗಲಿ ಸಮಾಲೋಚನೆ ನಡೆಸದೆ ಏಕಾಏಕಿ ಪಿಯು ವಿದ್ಯಾರ್ಥಿಗಳಿಗೆ 3 ಪರೀಕ್ಷೆ ನಡೆಸಲು ಉದ್ದೇಶಿಸಿರುವುದು ಅವೈಜ್ಞಾನಿಕ. ಈ ತೀರ್ಮಾನವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಡಿ.1ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್.ಸಿದ್ದರಾಜು, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕದ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಮಹದೇವ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೋಧಕೇತರ ಸಂಘದ ಜಿಲ್ಲಾಧ್ಯಕ್ಷ ರಾಜಕುಮಾರ್, ನಿವೃತ್ತ ಡಿಡಿಪಿಯು ನಾಗಮಲ್ಲೇಶ್, ಪುಟ್ಟು, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ 500 ಜನ ಪ್ರಾಂಶುಪಾಲರು, ಉಪನ್ಯಾಸಕರು ಪಾಲ್ಗೊಂಡಿದ್ದರು.