ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳಿಗೆ ರೂ.8682 ಬೆಂಬಲ ಬೆಲೆ ನಿರ್ಧಾರ

DC T BHUBALAN
ಜಿಲ್ಲಾ ದಂಡಾಧಿಕಾರಿ ಟಿ.ಭೂಬಾಲನ್
Published on

ವಿಜಯಪುರ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ರೂ. 8682 ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.

ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.26ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ 706 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರುಕಾಳು ಬಿತ್ತನೆಯಾಗಿದ್ದು, ಅಂದಾಜು 8805 ಕ್ವಿಂಟಾಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಗೆ ಆವಕವಾಗದೇ ಸಮೀಪದ ಮಾರುಕಟ್ಟೆಯಲ್ಲಿ ಹೆಸರುಕಾಳು ಕನಿಷ್ಠ 6495 ರಿಂದ ಗರಿಷ್ಠ 7851 ಹಾಗೂ ಸರಾಸರಿ 7002 ರೂ. ಪ್ರತಿ ಕ್ವಿಂಟಾಲ್‌ಗೆ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟಾಲ್ 8682 ರೂ.ಗೆ ಖರೀದಿಸಲು ತೀರ್ಮಾನಿಸಿ, ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ರೈತರ ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿ ಖರೀದಿ ಕೇಂದ್ರಗಳಲ್ಲಿ ಟಿಎಪಿಸಿಎಂಎಸ್ ಏಜೆನ್ಸಿ ಮೂಲಕ ಖರೀದಿಸಲು ನಿರ್ಣಯಿಸಲಾಯಿತು. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 2 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಎಫ್‌ಎಕ್ಯೂ ಗುಣಮಟ್ಟದ ಹೆಸರುಕಾಳು ಖರೀದಿಸಲು ನಿರ್ಣಯಿಸಿ, ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಎಪಿಎಂಸಿ ಯಾರ್ಡ್, ವಿಜಯಪುರ ಮೊ. 7892095176 ಕ್ಕೆ ಸಂಪರ್ಕಿಸಲು ತಿಳಿಸಲಾಗಿದೆ.

ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net