ಕುರುಬ ಸಮಾಜದಿಂದ ಈಶ್ವರಪ್ಪಗೆ ಬೆಂಬಲ

Ramakrishna moddali
ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಅಧ್ಯಕ್ಷ ರಾಮಕೃಷ್ಣ ಮೂಡಲಿ
Published on

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಕುರುಬ ಸಮಾಜ ಸೇರಿ ಹಿಂದುಳಿದ ವರ್ಗಗಳು ಬೆಂಬಲಿಸಿವೆ ಎಂದು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ ಅಧ್ಯಕ್ಷ ರಾಮಕೃಷ್ಣ ಮೂಡಲಿ ತಿಳಿಸಿದರು.

ಹಿಂದುಳಿದ ವರ್ಗಗಳ ನಾಯಕರೂ ಆಗಿರುವ ಈಶ್ವರಪ್ಪ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದ ಅನ್ಯಾಯವಾಗಿದೆ. ಹಾಗಾಗಿ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಈಶ್ವರಪ್ಪ ಅವರನ್ನು ಗೆಲ್ಲಿಸಿಕೊಂಡು ಬರಲು ನಿರ್ಧರಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ಹಿಂದೆ ವಿಧಾನಸಭೆ ಉಪ ಚುನಾವಣೆಯಲ್ಲಿ ರಾಣೆಬೆನ್ನೂರಿನಿಂದ ಕೆ.ಇ.ಕಾಂತೇಶ್ ಸ್ಪರ್ಧೆಗೆ ಅವಕಾಶವಿದ್ದರೂ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ತತ್ವದಡಿ ಟಿಕೆಟ್ ನಿರಾಕರಿಸಲಾಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಕಾಂತೇಶ್‌ಗೆ ಟಿಕೆಟ್ ತಪ್ಪಿಸಲಾಗಿದೆ. ಈಶ್ವರಪ್ಪ ಅವರ ಕುಟುಂಬದ ಏಳಿಗೆ ಸಹಿಸದ ಯಡಿಯೂರಪ್ಪ ಅವರು ಟಿಕೆಟ್ ತಪ್ಪಿಸಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿಯಿಂದ ಕುರುಬರಿಗೆ ಅನ್ಯಾಯವಾಗಿದೆ. 28 ಕ್ಷೇತ್ರಗಳಲ್ಲಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ನೀಡಿಲ್ಲ. ಇದನ್ನು ವೇದಿಕೆ ತೀವ್ರವಾಗಿ ಖಂಡಿಸಲಿದೆ. ಹಿಂದುತ್ವದ ಪರ ಗಟ್ಟಿಯಾಗಿ ಮಾತನಾಡುವ ಏಕೈಕ ನಾಯಕರಾಗಿರುವ ಈಶ್ವರಪ್ಪ ಇದೀಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು ಅವರನ್ನು ಗೆಲ್ಲಿಸಿಕೊಂಡು ಬರಬೇಕಿದೆ ಎಂದು ಮನವಿ ಮಾಡಿದರು. ಪ್ರಮುಖರಾದ ಮಧು, ಸೀತಾರಾಮ್, ರಾಜು, ಕುಮಾರ್, ವಿಜಯ್, ಚಂದ್ರಶೇಖರ್, ಕುಶ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net