ಜನರಿಗೆ ಶಾಂತಿ, ಸುವ್ಯವಸ್ಥೆ ಕಲ್ಪಿಸುವುದು ಆದ್ಯ ಕರ್ತವ್ಯ: ಆನೆಮಜಲಲ್ಲಿ ವಕೀಲರ ಭವನ ಉದ್ಘಾಟಿಸಿ ನ್ಯಾ.ಅಬ್ದುಲ್ ನಜೀರ್ ಅಭಿಪ್ರಾಯ

Court
Published on

ವಿಜಯವಾಣಿ ಸುದ್ದಿಜಾಲ ಪುತ್ತೂರು

ಶಾಂತಿ ಮತ್ತು ಸುವ್ಯವಸ್ಥೆ ಇಲ್ಲದಿದ್ದಲ್ಲಿ ಸಮಾಜ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಆದ್ಯ ಕರ್ತವ್ಯ. ಅದಕ್ಕಾಗಿ ಮೂಲ ವ್ಯವಸ್ಥೆಗಳೊಂದಿಗೆ ಹಲವಾರು ಕರ್ತವ್ಯಗಳನ್ನು ಪರಿಪಾಲನೆ ಮಾಡಬೇಕಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಹೇಳಿದರು.

ಮಂಗಳವಾರ ಪುತ್ತೂರು ನಗರದ ಆನೆಮಜಲು ಎಂಬಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ನ್ಯಾಯಾಲಯ ಸಂಕೀರ್ಣದ 2ನೇ ಹಂತದ ಕಟ್ಟಡ ಹಾಗೂ ದರ್ಬೆಯಲ್ಲಿ ನಿರ್ಮಾಣಗೊಳ್ಳಲಿರುವ ನ್ಯಾಯಾಧೀಶರ ವಸತಿ ಗೃಹಕ್ಕೆ ಶಿಲನ್ಯಾಸ ನೆರವೇರಿಸಿ, ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಕೀಲರ ಭವನ ಉದ್ಘಾಟಿಸಿ ಮಾತನಾಡಿದರು.

ವ್ಯಾಜ್ಯ ಎಂಬುದು ಕ್ಯಾನ್ಸರ್ ರೋಗದಂತೆ. ವ್ಯಾಜ್ಯವಿರುವಲ್ಲಿ ಶಾಂತಿ ಕಾಣಲು ಸಾಧ್ಯವಿಲ್ಲ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ನ್ಯಾಯಾಲಯದ ವ್ಯವಸ್ಥೆ ಅನಿವಾರ್ಯ. ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಸಂಬಂಧಿಸಿದ ಎಲ್ಲ ಬೇಡಿಕೆಗಳನ್ನು ಸಕಾಲದಲ್ಲಿ ಈಡೇರಿಸುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ಸೋಮಶೇಖರ್ ಮಾತನಾಡಿ ವಕೀಲರು ಬುದ್ದಿವಂತಿಕೆಯ ಜತೆ ಹೃದಯವಂತಿಕೆ ಬೆಳೆಸಿಕೊಂಡು ಮುಂದುವರಿಯಬೇಕು. ಸತ್ಯದ ಹುಡುಕಾಟದೊಂದಿಗೆ ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಇದಕ್ಕಾಗಿ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು ಎಂದರು.

ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ ಭಾರತವು ಜಗತ್ತಿಗೆ ನಾಗರೀಕತೆಯನ್ನು ಪರಿಚಯಿಸಿದ ದೇಶ. ಈ ಪರಂಪರೆಯನ್ನು ಮುಂದುವರಿಸುವ ಕೆಲಸವಾಗಬೇಕಾಗಿದೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೇ ಗೌಡ , ಹೈಕೋರ್ಟ್ ರಿಜಿಸ್ಟ್ರಾರ್ ನ್ಯಾಯಮೂರ್ತಿ ಶಿವಶಂಕರೇ ಗೌಡ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ಎಸ್.ವಿಶ್ವಜಿತ್ ಶೆಟ್ಟಿ, ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತು ಅಧ್ಯಕ್ಷ ಎಲ್.ಶ್ರೀನಿವಾಸ ಬಾಬು, ಮಾಜಿ ಅಧ್ಯಕ್ಷ ಪಿ.ಪಿ. ಹೆಗ್ಡೆ, ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಕಾಂತರಾಜ್ ಬಿ.ಟಿ ಮತ್ತಿತರರು ಮಾತನಾಡಿದರು.

ಹೈಕೋರ್ಟ್‌ನ್ಯಾಯಮೂರ್ತಿಗಳಾದ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಅವರನ್ನು ಸನ್ಮಾನಿಸಲಾಯಿತು. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪ್ರಮೋದ್ ಮತ್ತು ಕಂಟ್ರಾಕ್ಟರ್ ಆಸಿಫ್ ಸೀಕೋ ಅವರನ್ನು ಗೌರವಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ರೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ ಎನ್.ಎಸ್ ವಂದಿಸಿದರು. ವಕೀಲ ಕೆ.ಆರ್. ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net