ಸಮೀಕ್ಷೆಗೆ 3286 ಗಣತಿದಾರರು, 194 ಮೇಲ್ವಿಚಾರಕರು

samikshe
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗಾಗಿ ಜಿಲ್ಲೆಯಲ್ಲಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಟೌನ್‌ನ 16 ನೇ ವಾರ್ಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು. ಆಯೋಗವು ಸೆ. 22 ರಿಂದ ಅ.7 ವರೆಗೆ ಸಮೀಕ್ಷಾ ಕಾರ್ಯ ಹಮ್ಮಿಕೊಂಡಿದ್ದು ಇದಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿಬ್ಬಂದಿ ಹಾಗೂ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಸಿಬ್ಬಂದಿಯೊಂದಿಗೆ ಸಹಕರಿಸುವ ಮೂಲಕ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಆಧಾರ್ ಕಾರ್ಡ್ ಕಡ್ಡಾಯ: ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್‌ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್‌ಕಾರ್ಡ್‌ನ ಮೊಬೈಲ್ ನಂಬರ್‌ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್‌ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು, ಇದೊಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಎಲ್ಲರೂ ಇದಕ್ಕೆ ಕೈಜೋಡಿಸಬೇಕು ಎಂದರು.

ರಾಜ್ಯದ ಅಭಿವೃದ್ಧಿಗೆ ಪೂರಕ: ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು ಈ ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸಲಿದೆ. ಆದ್ದರಿಂದ ಗಣತೀದಾರರು ಮನೆಗಳ ಬಳಿ ಬಂದಾಗ ಅವರು ಕೇಳಿದ ದಾಖಲೆಗಳನ್ನು ನೀಡಿ ಅವರ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಬೇಕು ಎಂದು ಡಿಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net