ಹುಳು ಭಾದೆ ಕುರಿತು ಸಮೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Dc-Dr.Kumara
Published on

ಮಂಡ್ಯ: ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾದಿತ ಪ್ರದೇಶಗಳ ವೈಜ್ಞಾನಿಕ ಸಮೀಕ್ಷೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೆಂಗಿನ ಬೆಳೆಯು ಪ್ರಮುಖವಾಗಿದ್ದು, ಒಟ್ಟು 74,731 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆಯಲಾಗುತ್ತಿದೆ. ಮದ್ದೂರು, ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ತೆಂಗಿನ ಬೆಳೆ ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಬೇಸಿಗೆ ಸಮಯದಲ್ಲಿ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯು ಹೆಚ್ಚಾಗುತ್ತಿದೆ. ಅದರಲ್ಲೂ ಮದ್ದೂರು ತಾಲೂಕಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದರು.

ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ಬಗ್ಗೆ 1,428 ಗ್ರಾಮದಲ್ಲಿ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. 3,01,822 ತೆಂಗಿನ ತಾಕುಗಳನ್ನು ಸಮೀಕ್ಷೆ ಮಾಡಲು 200 ಸಮೀಕ್ಷೆದಾರರನ್ನು ನಿಯೋಜಿಸಿ ಅವರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆದಾರರು ಆಗಮಿಸಿದ ಸಂದರ್ಭದಲ್ಲಿ ರೈತರು ನಿಖರ ಮಾಹಿತಿ ನೀಡಿ ಸಹಕರಿಸಬೇಕು. ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾಧೆಯ ರೋಗ ತಡೆಗಟ್ಟಲು ತೋಟಗಾರಿಕೆ ಇಲಾಖೆ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net