ಗಡುವಿನೊಳಗೆ ರಸ್ತೆಗುಂಡಿ ಮುಚ್ಚದಿದ್ದರೆ ಅಮಾನತು: ಡಿಸಿಎಂ ಶಿವಕುಮಾರ್ ಎಚ್ಚರಿಕೆ

Vijayavani-Featured-Image
Published on

ಬೆಂಗಳೂರು: ನಗರದಲ್ಲಿ ಉಂಟಾಗಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗೆ ಮುಚ್ಚಲು ವಿಫಲರಾಗುವ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ನಗರದ ವೈಯಾಲಿಕಾವಲ್​​ನಲ್ಲಿರುವ ಬಿಬಿಎಂಪಿಯ ಐಪಿಪಿ ಕೇಂದ್ರದಲ್ಲಿ ಭಾನುವಾರ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಡಿಸಿಎಂ, ಈಗಾಗಲೇ 15 ದಿನಗಳ ಗಡುವಿನ ಒಳಗೆ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದ್ದೇನೆ. ಆದರೂ, ಇನ್ನೂ ಹಲವೆಡೆ ಗುಂಡಿಗಳನ್ನು ಮುಚ್ಚಿಲ್ಲ. ರಸ್ತೆಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಪಾಲಿಕೆಯ ಪ್ರತಿ ಅಧಿಕಾರಿಗಳು ಎಷ್ಟೇ ದೊಡ್ಡವರಿದ್ದರೂ ಪ್ರತಿಯೊಬ್ಬರೂ ರಸ್ತೆಯಲ್ಲಿ ನಿಂತು ಈ ಸಮಸ್ಯೆ ಬಗೆಹರಿಸಬೇಕು. ವಾರ್ಡ್‌ಗಳಲ್ಲಿ ಅಧಿಕಾರಿಗಳೇ ಖುದ್ದಾಗಿ ಹಾಜರಿದ್ದು ಗುಂಡಿ ಮುಚ್ಚುವ ಕೆಲಸ ಮಾಡಿಸಬೇಕು. ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿದ್ದು, ನಾವು ಬಹಳ ಜಾಗರೂಕರಾಗಿ ಇರಬೇಕು. ಮಳೆ ಬೀಳುವ ಸಂದರ್ಭದಲ್ಲಿ ನೀರು ನಿಲ್ಲುವ ಹಾಗೂ ಮನೆಗಳಿಗೆ ನುಗ್ಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿರುವುದಾಗಿ ಡಿಸಿಎಂ ಸ್ಪಷ್ಟಪಡಿಸಿದರು.

ವಿದೇಶ ಪ್ರವಾಸದಿಂದ ವಾಪಸ್ ಆದ ಬಳಿಕ ನಾನೇ ಖುದ್ದಾಗಿ ನಗರ ಪ್ರದಕ್ಷಣೆ ಮಾಡಿ ರಸ್ತೆಗಳ ಸ್ಥಿತಿಗಳನ್ನು ಪರಿಶೀಲಿಸುತ್ತೇನೆ. ಅಧಿಕಾರಿಗಳು ಬೇಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದರೆ ಅವರನ್ನು ಅಮಾನತು ಮಾಡಲು ಹಿಂದುಮುಂದು ನೋಡುವುದಿಲ್ಲ ಎಂದು ಡಿಸಿಎಂ ವಿವರಿಸಿದರು.

ಶಾಲೆಗಳಲ್ಲಿ ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಕಾರ್ಯಕ್ರಮ:

ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಿ 100 ವರ್ಷ ಪೂರೈಸಿರುವ ಸಂದರ್ಭದಲ್ಲಿ ಬೆಂಗಳೂರು ನಗರದ ಎಲ್ಲ ಶಾಲೆಗಳಲ್ಲಿ (ಪಾಲಿಕೆ ಹಾಗೂ ಖಾಸಗಿ ಶಾಲೆಗಳೂ ಸೇರಿ) ಗಾಂಧಿ ಜಯಂತಿ ದಿನದಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಮಾಡಬೇಕು. ಆ ಮೂಲಕ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net