ಸೆ.30 ರಂದು ಬೃಹತ್​ ಉದ್ಯೋಗ ಮೇಳ: ಎಸ್​.ವಿ. ಸಂಕನೂರು

26GDG06
ಗದಗ ದಲ್ಲಿ ಬೃಹತ್​ ಉದ್ಯೋಗ ಮೇಳ ಜರುಗಿಸುವ ಕುರಿತು ಪ್ರವಾಸಿ ಮಂದಿರದಲ್ಲಿ ಎಸ್​.ವಿ. ಸಂಕನೂರು ಸುದ್ದಿಗೋಷ್ಠೀ ನಡೆಸಿದರು. ಚಂದ್ರಶೇಖರ ಅಣ್ಣಿಗೇರಿ, ಪಿ. ಜಿ. ಪಾಟೀಲ ಇದ್ದರು.
Published on

50 ಕ್ಕೂ ಹೆಚ್ಚು ಕಂಪನಿ ಭಾಗಿ !

ವಿಜಯವಾಣಿ ಸುದ್ದಿಜಾಲ ಗದಗ
ನಗರದ ಜೆ.ಟಿ. ಕಾಲೇಜು ಆವರಣದಲ್ಲಿ ಸೆ. 30 ರಂದು ಜಿಲ್ಲಾ ಮಟ್ಟದ ಬೃಹತ್​ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಎಸ್​. ವಿ. ಸಂಕನೂರ ಹೇಳಿದರು.
ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರ ಹುಬ್ಬಳ್ಳಿ, ಎಸ್​. ಆರ್​. ಬೊಮ್ಮಾಯಿ ಟ್ರಸ್ಟ್​, ಕೆಎಲ್​ಇ ಸಂಸ್ಥೆಯ ತೋಂಟದಾರ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪದವೀಧರ ಮತಕ್ಷೇತ್ರ ಪ್ರತಿನಿಸುತ್ತಿರುವ ಕಾರಣಕ್ಕೆ ಪದವೀಧರ ಯುವಕರಿಗರ ಉದ್ಯೋಗ ದೊರಕಿಸಿ ಕೊಡುವುದು ನನ್ನ ಜವಾಬ್ದಾರಿ. ಆ ನಿಟ್ಟಿನಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸುವ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಹುಬ್ಬಳ್ಳಿಯಲ್ಲಿ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದೆ, ಅದೇ ರೀತಿ ಉತ್ತರ ಕನ್ನಡ, ಹಾವೇರಿ, ಗದಗ ಮತ್ತು ಧಾರವಾಡದಲ್ಲಿ ಉದ್ಯೋಗ ಮೇಳ ಆಯೋಜಿಸಿ ಯುವಕರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡಿರುವೆ. ಅದರ ಮುಂದುವರಿದ ಭಾಗವಾಗಿ ಗದಗ ಜಿಲ್ಲೆಯಲ್ಲಿ ಮತ್ತೊಮ್ಮೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ 2500ಕ್ಕೂ ಹೆಚ್ಚು ಹುದ್ದೆ ಭತಿರ್ ಮಾಡಿಕೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರೂ ಭಾಗವಹಿಸಬಹುದು. ಈಗಾಗಲೇ ಆನ್​ ಲೈನ್​ ನೋಂದಣಿ ಮಾಡಿಕೊಳ್ಳಲಾಗಿದೆ. ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಗದಗ ಮಾತ್ರವಲ್ಲದೇ ನೆರೆಯ ಜಿಲ್ಲೆಯ ಯುವಕರು ಇದರಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.
ಈ ಬಾರಿ ಉದ್ಯೋಗ ಮೇಳದಲ್ಲಿ ಯುವಕರು ಸ್ವ ಉದ್ಯೋಗ, ಕೈಗಾರಿಕೆ ಸ್ಥಾಪನೆಗೆ ಅನುಕೂಲ ಆಗುವಂತೆ ಎರಡು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಯಾವ ರೀತಿಯ ಉದ್ಯೋಗಕ್ಕೆ ಪ್ರೋತ್ಸಾಹ, ಪೂರಕ ವಾತಾವರಣವಿದೆ ಎನ್ನುವ ಕುರಿತು ಸಿಡಾಕ್​ ಹಾಗೂ ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರದ ಮುಖ್ಯಸ್ಥರು ಉಪನ್ಯಾಸ ನೀಡಲಿದ್ದಾರೆ ಎಂದರು.
ಸೆ.30ರಂದು ಬೆಳಗ್ಗೆ 10ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನರಗುಂದ ಶಾಸಕ ಸಿ. ಸಿ. ಪಾಟೀಲ, ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಮಾಜಿ ಸಚಿವ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಸ್​. ಪಿ. ಸಂಶಿಮಠ, ಕೆಎಲ್​ಇ ಅಧ್ಯಕ್ಷ ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಚಂದ್ರಶೇಖರ ಅಣ್ಣಿಗೇರಿ, ಪಿ. ಜಿ. ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net