

ಮಡಿಕೇರಿ: ಮಾ.೨೫ ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾರವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ಎಸ್‌ಒಪಿ ಮಾರ್ಗಸೂಚಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷೆ ಕೇಂದ್ರಗಳಲ್ಲಿ ಸೂಕ್ತವಾದ ಪೀಠೋಪಕರಣ/ ಆಸನದ ವ್ಯವಸ್ಥೆ, ಕುಡಿಯಲು ಶುದ್ಧವಾದ ನೀರು ಮತ್ತಿತರ ಮೂಲ ಸೌಲಭ್ಯಗಳು ಇರಬೇಕು. ಪರೀಕ್ಷಾ ದಿನಗಳಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕು/ಹೋಗಬೇಕು. ಪ್ರವೇಶ ಪತ್ರ ತೋರಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಬೇಕು ಎಂದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು, ವೆಬ್‌ಕಾಸ್ಟ್ ಮಾಡುವುದು ಮತ್ತಿತರ ಗಮನಹರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ವಿದ್ಯಾರ್ಥಿಗಳನ್ನು ಭಯಪಡಿಸಬಾರದು. ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದೆ, ಸುಗಮವಾಗಿ ಪರೀಕ್ಷೆ ನಡೆಸಬೇಕು. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಜತೆಗೆ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿಯ ಸ್ವೀಕೃತಿ ಕೇಂದ್ರದಲ್ಲಿ ಪರೀಕ್ಷೆಯ ಆಗುಹೋಗುಗಳ ಬಗ್ಗೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.೨೫ ರಿಂದ ಏ.೬ ರವರೆಗೆ ನಡೆಯಲಿದೆ. ಜಿಲ್ಲೆಯ ೨೭ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನ ೮, ಸೋಮವಾರಪೇಟೆ ತಾಲೂಕಿನ ೧೧, ವಿರಾಜಪೇಟೆ ತಾಲೂಕಿನ ೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ೧೭೧ ಪ್ರೌಢಶಾಲೆಯ ೬,೫೧೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ ೩,೩೪೦ ಬಾಲಕರು ಮತ್ತು ೩,೧೭೭ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲೂಕಿನ ೪೩, ಸೋಮವಾರಪೇಟೆ ತಾಲೂಕಿನ ೭೧ ಮತ್ತು ವಿರಾಜಪೇಟೆ ತಾಲ್ಲೂಕಿನ ೫೭ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಕೋರಲಾಗಿದೆ. ಹಾಗೆಯೇ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮನವಿ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗುತ್ತದೆ. ಜತೆಗೆ ವೆಬ್‌ಕಾಸ್ಟ್ ಮಾಡಲಾಗುತ್ತದೆ. ಡಯಟ್ ಹಿರಿಯ ಉಪನ್ಯಾಸಕರ ತಂಡವನ್ನು ರಚಿಸಿ ಜಾಗೃತಿ ದಳ ರಚಿಸಲಾಗಿದೆ ಎಂದು ಎಂ.ಚಂದ್ರಕಾಂತ್ ವಿವರಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನೋಡಲಾಧಿಕಾರಿ ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ(ಮಡಿಕೇರಿ), ಎಸ್. ಭಾಗ್ಯಮ್ಮ(ಸೋಮವಾರಪೇಟೆ), ಡಿವೈಪಿಸಿ ಎಂ.ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕಾ ಅಭಿರಕ್ಷಕರು, ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇತರರು ಇದ್ದರು.