

ಚನ್ನಗಿರಿ: ಬಾಬು ಜಗಜೀವನರಾಂ ಸ್ವಾತಂತ್ರ್ಯ ಹಾಗೂ ಸಾಮಾಜಿಕ ನ್ಯಾಯದ ಪರ ಹೋರಾಟಗಾರ ಮಾತ್ರವಲ್ಲ ಉತ್ತಮ ಸಂಸದೀಯ ಪಟುವೂ ಆಗಿದ್ದರು ಎಂದು ತಹಸೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಶನಿವಾರ ತಾಲೂಕು ಆಡಳಿತ, ನಾಡಹಬ್ಬಗಳ ಸಮಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ 118ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ದೇಶದ ಮೊದಲ ಉಪ ಪ್ರಧಾನಿಯಾಗಿ ಮಹತ್ತರ ಕೊಡುಗೆ ನೀಡಿದ್ದಾರೆ. ಅಸ್ಪಶ್ಯತಾ ನಿವಾರಣೆ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು.ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.
ಮಾನವ ಹಕ್ಕುಗಳ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ್, ಡಿಎಸ್ಎಸ್ ತಾಲೂಕು ಖಜಾಂಚಿ ಎಚ್.ಎನ್. ಮೂರ್ತಿ, ಬಿಸಿಎಂ ಅಧಿಕಾರಿ ರವಿ ಅಥರ್ಗ, ಕ್ಷೇತ್ರ ಸಮನ್ವಯಾಧಿಕಾರಿ ಡಾ.ಎಸ್. ಶಂಕರಪ್ಪ ಇದ್ದರು.