

ಭದ್ರಾವತಿ: ಸರ್ಕಾರಿ ಶಾಲೆ ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಅಪಪ್ರಚಾರದಲ್ಲಿ ತೊಡಗಿರುವ ಶಾಲಾಭಿವೃದ್ಧಿ ಸಮಿತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನ್ಯೂಟೌನ್ ಡಿವೈಎಸ್‌ಪಿ ಕಚೇರಿ ಮುಂಭಾಗ ಚಿಕ್ಕಗೊಪ್ಪೇಹಳ್ಳಿ ಗ್ರಾಮಸ್ಥರು, ಅಡುಗೆ ಸಹಾಯಕಿ ರೂಪಾ ಕುಟುಂಬಸ್ಥರು ಹಾಗೂ ಹೋರಾಟಗಾರರು ಶುಕ್ರವಾರ ಪ್ರತಿಭಟನೆ ನಡೆಸಿದರು. ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮದ ಎಕೆ ಕಾಲನಿ ನಿವಾಸಿ ರೂಪಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇದ್ದ ಅಡುಗೆ ಸಹಾಯಕಿ ಹುದ್ದೆಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದ್ದು ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೂಪಾ ಪರಿಶಿಷ್ಟ ಜಾತಿಗೆ ಸೇರಿರುವ ಹಿನ್ನಲೆಯಲ್ಲಿ ಎಸ್‌ಡಿಎಂಸಿ ಸದಸ್ಯರು ಕರ್ತವ್ಯ ನಿರ್ವಹಿಸದಂತೆ ಬೆದರಿಕೆ ಒಡ್ಡುತ್ತಿದ್ದು ಜಾತಿ ನಿಂದನೆ ಮಾಡಿ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೂಡಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ನಾಗರಾಜ್ ಪ್ರತಿಭಟನಾಕಾರರ ಮನವೊಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸ್ಥಳಕ್ಕೆ ಬಿಇಒ ಎ.ಕೆ.ನಾಗೇಂದ್ರಪ್ಪ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು. ಪ್ರಮುಖರಾದ ಬಾಲಕೃಷ್ಣ, ಸುರೇಶ್, ಎಸ್.ಕೆ.ಸುಧೀಂದ್ರ, ಮಂಜುನಾಥ್, ಚನ್ನಪ್ಪ ಇತರರಿದ್ದರು.