

ಮೈಸೂರು: ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿರುವ 574 ಘಟಕಗಳ ಪೈಕಿ ಕೇವಲ 88 ಘಟಕಗಳು ದುರಸ್ತಿಯಲ್ಲಿವೆ ಎಂಬ ವರದಿಯನ್ನು ನಂಬಲು ಸಾಧ್ಯವಿಲ್ಲ. ಸಾಕಷ್ಟು ಸಂಖ್ಯೆಯಲ್ಲಿ ಘಟಕಗಳು ದುರಸ್ತಿಗೀಡಾಗಿವೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್, ಸಾಕಷ್ಟು ಜಿಲ್ಲೆಗಳಲ್ಲಿ ಘಟಕಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ. ಆದರೆ ಯಾರು ಸಹ ಟೆಂಡರ್‌ನಲ್ಲಿ ಭಾಗವಹಿಸುತ್ತಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿಗೆ ಘಟಕದ ನಿರ್ವಹಣೆ ಜವಾಬ್ದಾರಿ ವಹಿಸಿ ತಿಂಗಳಿಗೆ ಮೂರು ಸಾವಿರ ರೂ. ನೀಡಲು ಈಗ ಆದೇಶವಾಗಿದೆ ಎಂದು ತಿಳಿಸಿದರು.
ದೊಡ್ಡಕವಲಂದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವೈಫಲ್ಯದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, 2015ರಲ್ಲಿ ಯೋಜನೆ ಪೂರ್ಣಗೊಂಡರೂ ಕಳಪೆ ಕಾಮಗಾರಿಯಿಂದ ಇದುವರೆಗೆ ಜನರಿಗೆ ನೀರು ಒದಗಿಸಲು ಸಾಧ್ಯವಾಗದಿರುವುದಕ್ಕೆ ಬೇಸರಿಸಿದರು. ಕೂಡಲೇ ಮರು ಟೆಂಡರ್ ಕರೆದು ಜನರಿಗೆ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ವಿವಿಧ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಹೊಲದಲ್ಲಿ ಬದುಗಳ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೆರೆ ಸುತ್ತ ಸಸಿಗಳನ್ನು ನೆಡುವ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಅಶ್ವಿನ್ ಕುಮಾರ್, ಹರ್ಷವರ್ಧನ್, ಜಿ.ಪಂ. ಅಧ್ಯಕ್ಷೆ ಪರಿಮಳಾ ಶ್ಯಾಂ, ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಇತರರು ಇದ್ದರು.
ವರ್ತುಲ ರಸ್ತೆಯನ್ನು ತ್ಯಾಜ್ಯಮುಕ್ತಗೊಳಿಸಿ: ವರ್ತುಲ ರಸ್ತೆಯ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಜಿಲ್ಲಾ ಪಂಚಾಯಿತಿ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಚರ್ಚಿಸಿ ಬಗೆಹರಿಸಬೇಕೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಮಾಡುವಷ್ಟು ವ್ಯವಸ್ಥೆ ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲ. ಆದರೆ ವರ್ತುಲ ರಸ್ತೆಯು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡದ ಹಿನ್ನೆಲೆಯಲ್ಲಿ ಪಾಲಿಕೆಯು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ಸ್ಥಳೀಯ ಗ್ರಾಮ ಪಂಚಾಯಿತಿಗಳು ಪಾಲಿಕೆಗೆ ನಿರ್ವಹಣಾ ಶುಲ್ಕವನ್ನು ಪಾವತಿಸಿ ತ್ಯಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಪಾಲಿಕೆಗೆ ವಹಿಸುವುದು ಉತ್ತಮ ಎಂದು ಸಲಹೆ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜಿ.ಟಿ. ದೇವೇಗೌಡ, ಈ ಬಗ್ಗೆ ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಜಿ.ಪಂ. ಹಾಗೂ ನಗರ ಪಾಲಿಕೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಸಲಹೆ ನೀಡಿದರು.
ರಾಜೀವ್‌ಗಾಂಧಿ ಹೆಸರು ಬದಲಿಸಿ: ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಿರುವ ಗ್ರಾ.ಪಂ. ಕಟ್ಟಡಗಳಿಗೆ ರಾಜೀವ್‌ಗಾಂಧಿ ಸೇವಾ ಕೇಂದ್ರದ ಹೆಸರನ್ನು ಇಡಲಾಗಿದೆ. ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಕಟ್ಟಡಕ್ಕೆ ವ್ಯಕ್ತಿಯೊಬ್ಬರ ಹೆಸರು ಇಡುವುದು ಸರಿಯಲ್ಲ ಎಂದು ಸಂಸದ ಪ್ರತಾಪ್‌ಸಿಂಹ ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಧರ್ಮಸೇನ, ರಾಜೀವ್‌ಗಾಂಧಿ ದೇಶದ ಮಾಜಿ ಪ್ರಧಾನಿ. ಅವರು ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಹೆಸರನ್ನು ತೆಗೆಯುವ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಚರ್ಚೆಯಾಗಿರುವ ಅಂಶವನ್ನು ಸರ್ಕಾರಕ್ಕೆ ಕಳುಹಿಸಿ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸಿದ್ದು-ಜಿಟಿಡಿ ನೀರಿಗೆ ಏಕೆ ಬಡಿದಾಡುವುದಿಲ್ಲ!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ.ದೇವೇಗೌಡ ಹೊರಗೆ ಸಾಕಷ್ಟು ಬಾರಿ ಬಡಿದಾಡಿಕೊಂಡಿದ್ದಾರೆ. ಆದರೆ ಇಬ್ಬರು ನಾಯಕರು ನೀರಿಗಾಗಿ ಏಕೆ ಬಡಿದಾಡಿಲ್ಲ. ಒಂದು ವೇಳೆ ನೀರಿಗಾಗಿ ಬಡಿದಾಡಿದ್ದರೆ ಜಿಲ್ಲೆಯ ನೀರಿನ ಸಮಸ್ಯೆ ಬಗೆಹರಿಯುತಿತ್ತು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹಾಸ್ಯಚಟಾಕಿ ಹಾರಿಸಿದರು.
ಜಿ.ಟಿ. ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪ್ರಸ್ತಾಪಿಸಿದ್ದಾರೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ. ಸಿದ್ದರಾಮಯ್ಯ ಹಾಗೂ ದೇವೇಗೌಡ ಇಬ್ಬರು ರಾಜ್ಯದ ನಾಯಕರು. ಅವರಿಬ್ಬರ ಅವಧಿಯಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ. ನಾನು ಈಗ ಸಚಿವನಾಗಿ ಬಂದಿದ್ದೇನೆ. ನನ್ನ ಅವಧಿಯಲ್ಲಾದರೂ ನೀರಿನ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.