

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹಾಗೂ ಹುಲಿ ದಾಳಿಯಿಂದ ಜಿಲ್ಲೆಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಕಾಡಾನೆ ಹಾವಳಿ, ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.
ನಗರದ ಜಿ.ಪಂ.ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕಾಡಾನೆ ಹಾವಳಿ, ಹುಲಿ ದಾಳಿ ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ವನ್ಯ ಪ್ರಾಣಿಗಳ ಹಾವಳಿ ತಡೆಯುವಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಕಾಡಾನೆ ಹಾವಳಿ, ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಡಾನೆ ಹಾವಳಿ, ಹುಲಿ ದಾಳಿ ನಿಯಂತ್ರಣ ಸಂಬಂಧ ವಿಷಯ ಪ್ರಸ್ತಾಪಿಸಿದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಇರುವ ಕಡೆಗಳಲ್ಲಿ ಬ್ಯಾರಿಕೇಡ್, ತಂತಿಬೇಲಿ, ಟ್ರಂಚ್ ನಿರ್ಮಾಣ ಮಾಡಬೇಕು. ದಕ್ಷಿಣ ಕೊಡಗಿನ ಭಾಗದಲ್ಲಿ ಆಗಾಗ ಹುಲಿ ದಾಳಿ ನಡೆಯುತ್ತಿದ್ದು, ಇದರಿಂದ ಜನ ಜಾನುವಾರುಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ಕೊಡಗು ಜಿಲ್ಲೆಯ ತೋಟಗಳಲ್ಲಿ ೨೦೦ ರಿಂದ ೨೫೦ ಕಾಡಾನೆಗಳು ವಾಸಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಕಾಡಾನೆ ಹಾವಳಿಯಿಂದ ಬೆಳೆ ಹಾನಿಯಾದಲ್ಲಿ ಬೆಳೆ ಹಾನಿ ಪರಿಹಾರ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಮಾತನಾಡಿ, ಶೇ.೮೦ ರಷ್ಟು ಕಾಡಾನೆಗಳು ಕಾಫಿ ತೋಟಗಳಲ್ಲಿ ಸುತ್ತಾಡಿಕೊಂಡಿವೆ. ಕಳೆದ ೧೫ ವರ್ಷಗಳಿಂದ ಕಾಡಾನೆಗಳು ಸಹ ಹೆಚ್ಚಾಗಿದ್ದು, ಇದನ್ನು ನಿಯಂತ್ರಣ ಮಾಡಬೇಕು. ಜೊತೆಗೆ ಕಾಡಾನೆಗಳಿಗೆ ಆಹಾರ, ನೀರು ಸಿಗುತ್ತಿಲ್ಲ. ಆದ್ದರಿಂದ ಬಿದಿರು ಗಿಡವನ್ನು ಹೆಚ್ಚು ನೆಡಬೇಕು ಎಂದು ಸಲಹೆ ಮಾಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕವನ್ನು ೨೦೨೪ ರೊಳಗೆ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದ ಅವರು, ಜಲ ಜೀವನ್ ಮಿಷನ್ ಯೋಜನಾ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ತಪ್ಪು ಮಾಹಿತಿ ನೀಡಿದ್ದಲ್ಲಿ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ೨೦೨೪ ರ ಡಿಸೆಂಬರ್ ಒಳಗೆ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕಿದೆ. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ತಾ.ಪಂ.ಇಒಗಳೇ ಹೆಚ್ಚಿನ ಹೊಣೆಗಾರಿಕೆ ವಹಿಸಬೇಕು ಎಂದು ಸೂಚಿಸಿದರು.
ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಗುಣಮಟ್ಟದ ಬಿತ್ತನೆ ಬೀಜ ಪೂರೈಸಬೇಕು. ದೂರು ಬರದಂತೆ ಎಚ್ಚರ ವಹಿಸಬೇಕು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಉಂಟಾಗದಂತೆ ಕೂಡಲೆ ವರದಿ ಸಲ್ಲಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ೩೫ ತಜ್ಞ ವೈದ್ಯರು ಬೇಕಿದೆ. ಹಾಗೆಯೇ ಅರವಳಿಕೆ ತಜ್ಞ ವೈದ್ಯರು ಬೇಕಿದೆ ಎಂದು ಮಾಹಿತಿ ನೀಡಿದರು. ಪ್ರತಿಕ್ರಿಯಿಸಿದ ಸಚಿವರು, ತಜ್ಞ ವೈದ್ಯರ ಭರ್ತಿಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ವಿಶೇಷ ಗಮನಹರಿಸುವಂತೆ ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಲಾಗಿದೆ. ಆ ನಿಟ್ಟಿನಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬಾನಾ ಎಂ.ಶೇಖ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಹಲವು ಮಾಹಿತಿ ನೀಡಿದರು.