

ಮದ್ದೂರು: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಡೆಂಘೆ ಜ್ವರ ನಿಯಂತ್ರಣಕ್ಕೆ ಅರೋಗ್ಯ ಇಲಾಖೆಯೊಂದಿಗೆ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿ, ತಾಲೂಕಿನಲ್ಲಿ ಡೆಂೆ ಜ್ವರ ನಿಯಂತ್ರಣದಲ್ಲಿದ್ದು ಸಾರ್ವಜನಿಕರು ಯಾವುದೇ ಆತಂಕ ಪಡುವ ಆತಂಕವಿಲ್ಲ. ಆದರೆ, ಈ ಬಗ್ಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು ಡೆಂಘೆ ಜ್ವರದ ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಡೆಂಘೆ ಜ್ವರ ಬಾರದಂತೆ ಸ್ವಚ್ಛತೆ ಕಾಪಾಡುವುದು, ಹಳ್ಳ, ಚರಂಡಿ, ಮನೆಯ ಸುತ್ತಮುತ್ತ ನೀರು ನಿಂತುಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಾಲಾ, ಕಾಲೇಜು, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜ್ವರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೋಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪಟ್ಟಣದ ಕೆ.ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡುವ 3 ಯಂತ್ರಗಳು ಇದ್ದು, ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಕೆಲವರು ಮಂಡ್ಯಕ್ಕೆ ಹೋಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ 3 ಇರುವ ಯಂತ್ರಗಳನ್ನು 5ಕ್ಕೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ ಮಾತನಾಡಿ, ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಒಟ್ಟು 77 ಡೆಂೆ ಜ್ವರ ಪ್ರಕರಣ ಕಂಡು ಬಂದಿದ್ದು, ಇದರಲ್ಲಿ 75 ಜನರು ಗುಣಮುಖರಾಗಿದ್ದು, ಇಬ್ಬರು ಮಾತ್ರ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರಗೆ ಯಾವುದೇ ಸಾವು ಸಂಭವಿಸಿಲ್ಲ. ತಾಲೂಕಿನಲ್ಲಿ ಡೆಂೆ ಜ್ವರ ನಿಯಂತ್ರಣದಲ್ಲಿದ್ದು, ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಮುಂಜಾಗ್ರಾತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಾಪಂ ಇಒ ಸಂದೀಪ್, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ಅಧಿಕಾರಿಗಳಾದ ಡಾ.ಕಾಂತರಾಜು, ಡಾ.ಬೆಟ್ಟಸ್ವಾಮಿ ಇತರರು ಇದ್ದರು.