ಸಾಂಕ್ರಾಮಿಕ ರೋಗ ತಡೆಯಲು ಕ್ರಮ ಕೈಗೊಳ್ಳಿ

Take action to prevent epidemics
ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯ ಸಂಭಾಗಣದಲ್ಲಿ ಡೆಂಗೆ ಹಾಗೂ ಮಲೇರಿಯಾ ರೋಗಗಳ ಸ್ಥಿತಿ-ಗತಿ, ನಿವಾರಣಾ ಕುರಿತು ಆಯೋಜಿಸಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಎಲ್. ಲಕ್ಕಣ್ಣವರ, ಡಾ. ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ, ರಾಜಶೇಖರ್ ದೈವಾಡಿ, ಡಾ. ರಾಜೇಶ್ವರಿ ಗೋಲಗೇರಿ ಇದ್ದರು.
Published on

ವಿಜಯಪುರ: ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಡೆಂಗೆ, ಮಲೇರಿಯಾ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

ರಾಷ್ಟ್ರೀಯ ಡೆಂಗೆ ದಿನಾಚರಣೆ ಹಾಗೂ ವಿಶ್ವ ಮಲೇರಿಯಾ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡೆಂಗೆ ಹಾಗೂ ಮಲೇರಿಯಾ ರೋಗಗಳ ಸ್ಥಿತಿಗತಿ, ನಿವಾರಣೆ ಬಗ್ಗೆ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ನಿಯಮಿತವಾಗಿ ಫಾಗಿಂಗ್ ಮಾಡುವುದು, ಚರಂಡಿ ಸ್ವಚ್ಛತೆ, ಮಳೆ ನೀರು ನಿಲ್ಲದಂತೆ ಕ್ರಮ ವಹಿಸುವುದರ ಜತೆಗೆ ಸಾಂಕ್ರಾಮಿಕ ರೋಗ ಹರಡುವ ಕುರಿತಾಗಿ ಜನ ಸಮುದಾಯದಲ್ಲಿ ಮಲೇರಿಯಾ, ಡೆಂಗೆ ರೋಗಗಳ ಲಕ್ಷಣಗಳು ಹರಡುವಿಕೆ, ತಡೆಗಟ್ಟುವಿಕೆಗೆ ಜಾಗೃತಿ ಅಭಿಯಾನ ಕೈಗೊಳ್ಳಬೇಕು. ಹೆಚ್ಚು ರೋಗ ಪ್ರಕರಣಗಳು ವರದಿಯಾದ ಪ್ರದೇಶದಲ್ಲಿ ಸೊಳ್ಳೆ ಪರದೆ ವಿತರಿಸಲು ಕ್ರಮವಹಿಸಬೇಕು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಕಾಲದಲ್ಲಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಸಂಪತ್ ಗುಣಾರಿ ಮಾತನಾಡಿ, ಜಿಲ್ಲೆಯಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ರಾಷ್ಟ್ರೀಯ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಾದ್ಯಂತ ಒಟ್ಟು 1,630 ತಂಡಗಳನ್ನು ರಚಿಸಲಾಗಿದೆ. ಮನೆಗಳ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಎಲ್. ಲಕ್ಕಣ್ಣವರ, ಡಾ. ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯರು ಜಿಲ್ಲಾ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net