

* ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸೂಚನೆ
ರಾಮನಗರ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಶೇಷಗಿರಿಹಳ್ಳಿ, ಹೆಜ್ಜಾಲ ಗೇಟ್, ಕಲ್ಲುಗೋಪಳ್ಳಿ ಹಾಗೂ ಹನುಮಂತನಗರದಲ್ಲಿ ಅಪಘಾತ ಹೆಚ್ಚುತ್ತಿದ್ದು, ಬ್ಲಾಕ್ ಎಂದು ಗುರುತಿಸಿ, ಅಪಘಾತ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸ್ಥಳಗಳಲ್ಲಿ ವಾಹನ ಸವಾರರು ರಾಂಗ್ ರೂಟ್ನಲ್ಲಿ ಸಂಚರಿಸುವ ಕಾರಣ ಅಪಘಾತ ಸಂಭವಿಸುತ್ತವೆ. ಹಾಗಾಗಿ ಈ ರೀತಿ ತಪ್ಪು ಮಾರ್ಗದಲ್ಲಿ ಸಂಚರಿಸುವವರಿಗೆ ಮೊದಲ ಹಂತದಲ್ಲಿ ದಂಡ ವಿಧಿಸಬೇಕು. ನಂತರ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು.
ಈ ಜಾಗಗಳಲ್ಲಿ ಹಂಪ್ಸ್ ಹಾಕಿಸಿ ಅದಕ್ಕೆ ಬಣ್ಣ ಬಳಿಯಬೇಕು. ಈ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕ ಅಳವಡಿಸಬೇಕು ಎಂದು ಪೊಲೀಸ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ರಸ್ತೆಯಲ್ಲಿನ ಗುಂಡಿಗಳಿಂದ ಅಪಘಾತಗಳಾಗುವುದು ಅಥವಾ ಸಾವು&ನೋವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಪ್ರಮುಖವಾಗಿ ಬಸ್ಗಳು ಸಂಚರಿಸುವ ರಸ್ತೆಯಲ್ಲಿ ಗುಂಡಿಗಳಿದ್ದರೆ ಮೊದಲು ಮುಚ್ಚಬೇಕು. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗದಲ್ಲಿ ಹಾಕಿರುವ ರಸ್ತೆ ಸುರಕ್ಷತೆಯ ಮೆಸ್ಗಳನ್ನು ಕೆಲವೆಡೆ ಕತ್ತರಿಸಲಾಗಿದ್ದು, ಅದನ್ನು ಪುನಃ ಸುಸ್ಥಿತಿಗೆ ತರಬೇಕು. ಈ ಹೆದ್ದಾರಿಯಲ್ಲಿ ಅಪಘಾತಗಳು, ಸಾವು ನೋವುಗಳು ಆಗದಂತೆ ಎಚ್ಚರಿಕೆಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಲೋಕೋಪಯೋಗಿ ವಿಭಾಗದ ಕಾರ್ಯಪಾಲಕ ಅಭಿಯಂತ ಎಚ್. ಎಂ. ಮಹಾದೇವಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿತೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಿರಂಜನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತ ನಿಶ್ಚಿತ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.