

ರಾಯಚೂರು: ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿನ ಮೂಲ ಸೌಕರ್ಯಗಳ ಕೊರತೆಯ ಪಟ್ಟಿ ಮಾಡಿ, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದ ಅಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.
ಸ್ಥಳೀಯ ಜಲನಿರ್ಮಲ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಆಯಾ ಇಲಾಖೆ ಅಕಾರಿಗಳ ಜವಾಬ್ದಾರಿಯಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ವಸತಿ ನಿಲಯಗಳ ನಿರ್ಮಾಣ ಸಂದರ್ಭದಲ್ಲಿ ಜಮೀನುಗಳಿಗೆ ರಸ್ತೆ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆಯಾದಾಗ ಅಥವಾ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಕೊಡಿಸಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟದ ವ್ಯವಸ್ಥೆ ಮಾಡಬೇಕು.
ನಗರದಲ್ಲಿ ಜನರಿಗೆ ಸಮರ್ಪಕ ಕುಡಿಯುವ ನೀರು, ವಿದ್ಯುತ್ ದೀಪ ಸೌಲಭ್ಯ ಹಾಗೂ ಕಸ ವಿಲೇವಾರಿಗೆ ನಗರಸಭೆ ಅಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ರಸ್ತೆ ದುರಸ್ತಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎನ್.ಎಸ್.ಬೋಸರಾಜು ಅಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಮಾತನಾಡಿ, ಸಂಬಂಸಿದ ಅಕಾರಿಗಳು ವಸತಿ ನಿಲಯಗಳಲ್ಲಿನ ಸಮಸ್ಯೆಗಳನ್ನು ಪಟ್ಟಿ ಶೀಘ್ರವಾಗಿ ನೀಡಬೇಕು. ಸ್ಥಳೀಯ ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಿ ಅವಶ್ಯಕತೆಯಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕ ಹಂಪಯ್ಯ ನಾಯಕ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾ ನಿರ್ದೇಶಕ ವಿ.ಪ್ರಕಾಶ, ಸಹಾಯಕ ಆಯುಕ್ತೆ ಮಹೆಬೂಬಿ, ಜೆಸ್ಕಾಂ ಎಸ್‌ಇ ಚಂದ್ರಶೇಖರ ದೇಸಾಯಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಡಿಡಿಪಿಐ ಸುರೇಶ ಹುಗ್ಗಿ ಸೇರಿದಂತೆ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.