ಕುಡಿವ ನೀರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ

mys dc meeting
Published on

ಮೈಸೂರು: ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.


ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.


ಕುಡಿಯುವ ನೀರಿನ ಲಭ್ಯತೆ ಬಗ್ಗೆ ಮಾಹಿತಿ ಇಟ್ಟುಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಆಗುವಂತಹ ಸಮಸ್ಯಾತ್ಮಕ ಪ್ರದೇಶಗಳು, ಗ್ರಾಮಗಳನ್ನು ಮೊದಲೇ ಗುರುತಿಸಿಕೊಳ್ಳಬೇಕು. ಪ್ರತಿ ಗ್ರಾಮಕ್ಕೆ ಕಡ್ಡಾಯವಾಗಿ ಒಂದೊಂದು ಖಾಸಗಿ ಕೊಳವೆಬಾವಿ ಆಯ್ದುಕೊಂಡು ಅದರ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.


ಶುದ್ಧತೆ ಹಾಗೂ ಗುಣಮಟ್ಟ ಪರಿಶೀಲಿಸಿ:


ಮುಂದಿನ ದಿನಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಆದ್ದರಿಂದ ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯ ಇರುವ ಕಡೆಗೆ ಈಗಲೇ ಟೆಂಡರ್ ಕರೆದು ವ್ಯವಸ್ಥೆ ಮಾಡಿ ಇಟ್ಟುಕೊಳ್ಳಬೇಕು. ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಲು ಸಹಾಯವಾಣಿ ತೆರೆದು ಸಿಬ್ಬಂದಿ ನೇಮಕ ಮಾಡಬೇಕು ಎಂದರು. ಪೂರೈಕೆ ಮಾಡುವ ನೀರಿನ ಶುದ್ಧತೆ ಹಾಗೂ ಗುಣಮಟ್ಟ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಡಿಸಿ ರಾಜೇಂದ್ರ ಹೇಳಿದರು.


ಹೊಸ ಕೊಳವೆಬಾವಿಗಳನ್ನು ಕೊರೆಯಲು ಅಗತ್ಯ ಇರುವ ಕಡೆ ಗುರುತಿಸಿ ಇಟ್ಟುಕೊಳ್ಳಬೇಕು. ಬರವನ್ನು ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಬೇಕು ಎಂದರು. ಬರ ಪರಿಹಾರದ ಹಣ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.


ಜಾನುವಾರುಗಳ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಮೇವು ಲಭ್ಯತೆ ಬಗ್ಗೆ ಮಾಹಿತಿ ಇರಬೇಕು. ಮೇವಿನ ಬೀಜದ ಕಿರುಪೊಟ್ಟಣಗಳನ್ನು ರೈತರಿಗೆ ವಿತರಣೆ ಮಾಡಲಾಗಿದೆ. ಇದು ಸದ್ಬಳಕೆ ಆಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಒಂದು ವಾರದೊಳಗೆ ತಾಲೂಕುಗಳಲ್ಲಿ ರೈತ ಮುಖಂಡರೊಂದಿಗೆ ಕುಡಿಯುವ ನೀರು, ಜಾನುವಾರು ಮೇವು ಲಭ್ಯತೆ, ರಸಗೊಬ್ಬರ ಕೊರತೆ, ವಿದ್ಯುತ್ ಕುರಿತಂತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.


ಫ್ರೂಟ್ಸ್ ಐಡಿ ಸೃಷ್ಟಿಯಲ್ಲಿ ಗುರಿ ಸಾಧಿಸಿ:


ರೈತರಿಗೆ ಫ್ರೂಟ್ಸ್ (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ತಂತ್ರಾಂಶದಲ್ಲಿ ಐಡಿ ಸೃಷ್ಟಿಸಬೇಕು. ಈ ಪ್ರಕ್ರಿಯೆಯಲ್ಲಿ ನೂರರಷ್ಟು ಪ್ರಗತಿ ಸಾಧಿಸಬೇಕು. ರೈತರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲು ಈ ಐಡಿ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.


ಅಪರ ಜಿಲ್ಲಾಧಿಕಾರಿ ಪಿ.ಶಿವರಾಜ್, ಪಾಲಿಕೆಯ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net