ರಾಜಾಸೀಟ್ ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ: ವೆಂಕಟ್ ರಾಜಾ ಸೂಚನೆ

dc sabhe
Published on

ಮಡಿಕೇರಿ: ರಾಜಾಸೀಟ್ ಉದ್ಯಾನವನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ರಾಜಾಸೀಟು ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೆಲ್ಟರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸಬೇಕು. ರಾಜಾಸೀಟನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟು ಅಭಿವೃದ್ಧಿ ಸಂಬಂಧ ಬಾಕಿ ಇರುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಅವರು ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು. ಕೂರ್ಗ್ ವಿಲೇಜ್ ಅಭಿವೃದ್ಧಿ ಪಡಿಸಬೇಕು. ನಗರಸಭೆಯಿಂದ ನೀರು ಸಂಪರ್ಕ ಪಡೆಯುವುದು ಸೇರಿದಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೀಶ್ ಮಾತನಾಡಿ, ರಾಜಾಸೀಟು, ಕೂರ್ಗ್ ವಿಲೇಜ್ ಅಭಿವೃದ್ಧಿ ಜತೆಗೆ ಗದ್ದುಗೆ ಉದ್ಯಾನವನ ಹಾಗೂ ನೆಹರು ಮಂಟಪ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು. ನಂತರ, ಪ್ರಸಕ್ತ ಸಾಲಿನಲ್ಲಿ ರಾಜಾಸೀಟು ಉದ್ಯಾನವನ ನಿರ್ವಹಣೆ ಹಾಗೂ ಅಭಿವೃದ್ಧಿ ಸಂಬಂಧ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ಪಡೆದರು.


ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್, ರಾಜಾಸೀಟಿನಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಎಲ್‌ಇಡಿ ಫಲಕ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.


ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಸಹಾಯಕ ಎಂಜಿನಿಯರ್ ಸತೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಅವರು ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net