ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ

12 HANUR 1
Published on

ಹನೂರು: ಗ್ರಾಮಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಸೂಚಿಸಿದರು.


ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿಗೃಹದಲ್ಲಿ ಗುರುವಾರ ಕುಡಿಯುವ ನೀರಿನ ಸಂಬಂಧ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.


ಹನೂರು ಭಾಗದಲ್ಲಿ ಈ ಬಾರಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಕುಸಿದಿದೆ. ಪರಿಣಾಮ ಈಗಾಗಲೇ ತಾಲೂಕು ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಈ ಬಗ್ಗೆ ಹೆಚ್ಚು ದೂರುಗಳು ಬರುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ, ಪಿಡಿಒಗಳು ಈ ಬಗ್ಗೆ ಅಗತ್ಯ ಕ್ರಮ ವಹಿಸಬೇಕು. ಈ ದಿಸೆಯಲ್ಲಿ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಲ್ಲಿ ಮೊದಲು ಸ್ಥಳೀಯ ಖಾಸಗಿ ಜಮೀನಿನ ಮಾಲೀಕರನ್ನು ಮನವೊಲಿಸಿ ಕೊಳವೆ ಬಾವಿಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದು ಗ್ರಾಮಗಳಿಗೆ ಪೂರೈಸಬೇಕು. ಇಲ್ಲವೇ ಟ್ಯಾಂಕರ್ ಮೂಲಕ ಒದಗಿಸಬೇಕು. ಬೋರ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದಲ್ಲಿ ಕೊಳವೆಬಾವಿ ಮರು ಕೊರೆಸಬೇಕು. ಕಚೇರಿಯಲ್ಲಿ ಹೆಚ್ಚು ಸಮಯ ಕಳೆಯದೆ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದರು.


ತಾಪಂ ಇಒ ಉಮೇಶ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಸಂಬಂಧ ಈಗಾಗಲೇ ಹಲವು ಬಾರಿ ಸಭೆ ನಡೆಸಲಾಗಿದ್ದು, ಅಗತ್ಯ ಸೂಚನೆ ನೀಡಲಾಗಿದೆ. ಆದ್ದರಿಂದ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು ಎಂದು ಪಿಡಿಒಗಳಿಗೆ ತಿಳಿಸಿದರು.


ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ತಾಪಂ ಸಹಾಯಕ ನಿರ್ದೇಶಕ ರವೀಂದ್ರ, ಪಶು ವೈದ್ಯಾಧಿಕಾರಿ ಡಾ.ಸಿದ್ದರಾಜು, ಪಿಡಿಒಗಳು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net