

ಹಾಸನ: ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಸೂಚಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಬಿ.ಸಿ.ರಾಯ್ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗರ್ಭಿಣಿಯರಿಗೆ ನಿಗದಿತ ಸಮಯದಲ್ಲಿ ನೀಡಬಹುದಾದ ಆರೋಗ್ಯ ಸೇವೆಗಳನ್ನು ತಪ್ಪದೆ ನೀಡಿ ಎಚ್ಚರಿಕೆ ವಹಿಸಬೇಕು. ಗರ್ಭಿಣಿಯರ ಆರೋಗ್ಯಕ್ಕಾಗಿ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ಅದನ್ನು ತಲುಪಿಸುವುದರ ಜತೆಗೆ ಸುರಕ್ಷಿತ ಹೆರಿಗೆಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.
ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹೆರಿಗೆ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ಎಚ್ಚರಿಕೆ ವಹಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ವಿಳಂಬ ಮಾಡದೆ ವಯಸ್ಸಿನ ಪ್ರಮಾಣ ಪತ್ರ ಹಾಗೂ ವಿಕಲಚೇತನರಿಗೆ ಯುಡಿಐಡಿ ಪ್ರಮಾಣ ಪತ್ರ ನೀಡಲು ಸ್ಪಂದಿಸಿ ಕೆಲಸ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
13 ನಮ್ಮ ಕ್ಲಿನಿಕ್‌ಇದ್ದು, ಇವುಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸುವಂತೆ ಸೂಚಿಸಿದರು. ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ 5 ತಾಯಿ ಮರಣ ಹೊಂದಿದ್ದಾರೆ. ಇವುಗಳಲ್ಲಿ ನಾಲ್ಕು ಹೊರ ಜಿಲ್ಲೆಗಳಿಂದ ಬಂದವರಾಗಿದ್ದು, ಒಬ್ಬರು ಮಾತ್ರ ಹಾಸನ ಜಿಲ್ಲೆಯರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅವರ ಆರೋಗ್ಯ ಸುಧಾರಣೆ ಆಗಿದೆಯಾ ಎಂದು ಫಾಲೋಅಪ್ ಮಾಡಬೇಕು. ಎಲ್ಲ ಮಕ್ಕಳಿಗೆ ಒಳ್ಳೆಯ ಜೀವನ ಕೂಡುವ ನಿಟ್ಟಿನಲ್ಲಿ ಮೊದಲನೆಯದಾಗಿ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಒದಗಿಸಲು ಗಮನಹರಿಸಬೇಕು. ಕೂಲಿ ಕಾರ್ಮಿಕರಿಗೆ ಮನವೊಲಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನಿಗದಿತ ಸಮಯದಲ್ಲಿ ಲಸಿಕೆ ಹಾಕಿಸಲು ಹಾಗೂ ಪೌಷ್ಟಿಕ ಆಹಾರ ಒದಗಿಸುವುದರ ಜತೆಗೆ ನಿರ್ದಿಷ್ಟ ತೂಕ ಬರುವವರೆಗೆ ಎಚ್ಚರಿಕೆ ವಹಿಸಬೇಕು ಎಂದರು.
ಗುಡ್ಡಕಾಡು ಪ್ರದೇಶದಲ್ಲಿರುವ ಗರ್ಭಿಣಿಯರು ಹೆರಿಗೆಗಾಗಿ ನಿರೀಕ್ಷಿತ ದಿನಾಂಕಕ್ಕೆ ಎರಡು ದಿನ ಮುಂಚಿತವಾಗಿ ಆಸ್ಪತ್ರೆಗೆ ಬಂದು ದಾಖಲಾಗುವಂತೆ ವೈದ್ಯರು ತಿಳಿಸಬೇಕು. ತಪಾಸಣೆ ನಡೆಸಿ ನಿರಂತರವಾಗಿ ಗಮನಹರಿಸಬೇಕು ಎಂದು ತಿಳಿಸಿದರು.
ಒಂದು ಸಮಿತಿ ರಚನೆ ಮಾಡಿ ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಮತ್ತು ಮರಣ ತಪ್ಪಿಸಲು ಏನು ಮುಂಜಾಗ್ರತೆ ವಹಿಸಬೇಕಾಗಿತ್ತು ಎಂಬುದರ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ತಿಳಿಸಿದರು.
ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ವೈದ್ಯರು ಲಭ್ಯವಿರಬೇಕು. ಜತೆಗೆ ಸಿಬ್ಬಂದಿ ಸಮವಸ್ತ್ರ ಧರಿಸಿರಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ-ಕಾಲೇಜು ಆವರಣದಿಂದ 200 ಮೀಟರ್ ಒಳಗೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ, ಈ ನಿಟ್ಟಿನಲ್ಲಿ ಕಾನೂನು ಉಲ್ಲಂಘಿಸಿದರೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ 50ಕ್ಕಿಂತ ಹೆಚ್ಚು ಹೆಣ್ಣು ಮಕ್ಕಳಿರುವ ಪ್ರೌಢಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್ ವಿಲೇವಾರಿಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗಪ್ಪ, ಆರ್.ಸಿ.ಎಚ್.ಅಧಿಕಾರಿ ಡಾ.ಶಿವಶಂಕರ್, ಡಾ.ರಂಗಲಕ್ಷ್ಮೀ ಇತರರು ಇದ್ದರು.