ರೋಗ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ

C.C. PATIL.
Published on

ವಿಜಯವಾಣಿ ಸುದ್ದಿಜಾಲ ಗದಗ

ಕರೊನಾ ನಿರ್ವಹಣೆ, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸರ್ಕಾರ, ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಜಿಲ್ಲಾಡಳಿತದೊಂದಿಗೆ ಮಂಗಳವಾರ ಸಚಿವರು, ಶಾಸಕರು, ಸಂಸದರೊಂದಿಗೆ ನಡೆದ ವಿಡಿಯೋ ಕಾನ್ಪರೆನ್ಸ್​ನಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಸೋಂಕು ನಿಯಂತ್ರಣ, ಕರೊನಾ ಸಂಬಂಧಿತ ಸಾವು, ಜಿಲ್ಲೆಯಲ್ಲಿ ಜನರು ದೈಹಿಕ ಅಂತರ ಕಾಪಾಡಿಕೊಳ್ಳು ವುದು, ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಸೋಂಕು ನಿಯಂತ್ರಣದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಸುಂದರೇಶ್​ಬಾಬು ವಿವರಿಸಿದರು.

ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕರೊನಾ ಸೋಂಕು ತಡೆ, ಮೇಲ್ವಿಚಾರಣೆಗೆ ರಾಜ್ಯ ಸರ್ಕಾರದ ನಿರ್ದೇಶನದಂತೆ 14 ತಂಡಗಳನ್ನು ರಚಿಸಲಾಗಿದೆ. ಪ್ರತಿ ಸಮಿತಿಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಆ ತಂಡಗಳ ನಾಯಕರನ್ನಾಗಿ ನೇಮಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಸಹಕಾರದೊಂದಿಗೆ ತಾಲೂಕು ಮಟ್ಟದ ತಂಡಗಳನ್ನು ರಚಿಸಿಕೊಂಡು ತಂಡಕ್ಕೆ ವಹಿಸಿರುವ ನಿರ್ದಿಷ್ಟ ಕಾರ್ಯಗಳನ್ನು ನಿರ್ವಹಿಸಲು ಸೂಚಿಸಲಾಗಿದೆ ಎಂದರು.

ಜಿಪಂ ಸಿಇಒ ಡಾ. ಆನಂದ ಕೆ. ಮಾತನಾಡಿ, ಹಳ್ಳಿಗಳಲ್ಲಿ ಕರೊನಾ ಸೋಂಕು ತಡೆಗೆ ಗ್ರಾಪಂ ಮಟ್ಟದಲ್ಲಿ ಜನರ ಆರೋಗ್ಯ ತಪಾಸಣೆ ಮಾಡುವುದು. ಮುಂಜಾಗ್ರತೆ ಕ್ರಮವಾಗಿ ಜನರ ಆಮ್ಲಜನಕ ಪ್ರಮಾಣ ಪರೀಕ್ಷಿಸುವ ಪಲ್ಸ್ ಆಕ್ಸಿಮೀಟರ್ ಪೂರೈಸಲಾಗುತ್ತಿದೆ. ಪಿಡಿಒಗಳಿಗೆ ಇದನ್ನು ಬಳಸುವ ಮತ್ತು ಜನರಿಗೆ ತಿಳಿವಳಿಕೆ ನೀಡುವ ಕುರಿತು ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್​ನಿಂದ ಮರಣ ಪ್ರಮಾಣ ಕಡಿಮೆ ಮಾಡಲು ಆರೋಗ್ಯ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಅದರ ಕಾರಣಗಳ ಕುರಿತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಸೂಕ್ತ ವೈದ್ಯಕೀಯ ಚಿಕಿತ್ಸೆ ಪ್ರಾರಂಭಿಸಬೇಕು ಎಂದು ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.

ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಸೋಂಕು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರು ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಅನವಶ್ಯಕವಾಗಿ ಮನೆಯಿಂದ ಹೊರಗೆ ಬಾರದೆ ಕರೊನಾ ನಿಮೂಲನೆ ಮಾಡಲು ಸಹಕಾರ ನೀಡಬೇಕು ಎಂದು ವಿನಂತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net